ADVERTISEMENT

ಬಿಟ್‌ ಕಾಯಿನ್‌ ಪ್ರಕರಣ: ‘ಘೋಷಿತ ಆರೋಪಿ’ ಆದೇಶ ರದ್ದು

ಬಿಟ್‌ ಕಾಯಿನ್‌ ಪ್ರಕರಣ: 8ರಂದು ತನಿಖಾಧಿಕಾರಿ ಮುಂದೆ ಹಾಜರಾಗಲು ಶ್ರೀಧರ್ ಕೆ.ಪೂಜಾರ್‌ ಅವರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಮೇ 2024, 16:31 IST
Last Updated 2 ಮೇ 2024, 16:31 IST
ಬಿಟ್‌ ಕಾಯಿನ್‌-ಪ್ರಾತಿನಿಧಿಕ ಚಿತ್ರ
ಬಿಟ್‌ ಕಾಯಿನ್‌-ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಧರ್ ಕೆ.ಪೂಜಾರ್ ವಿರುದ್ಧದ ‘ಘೋಷಿತ ಆರೋಪಿ’ ಎಂಬ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಘೋಷಿತ ಆರೋಪಿ ಎಂದು ವಿಚಾರಣಾ ನ್ಯಾಯಾಲಯ ವಾರಂಟ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಶ್ರೀಧರ್ ಕೆ.ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ವಿ.ಶ್ರೀಶಾನಂದ ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಶ್ರೀಧರ್ ಪೂಜಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಅರ್ಜಿದಾರರು ಕಾನೂನು ಪರಿಪಾಲಕರಾಗಿದ್ದು, ಉನ್ನತ ಹುದ್ದೆಯಲ್ಲಿದ್ದಾರೆ. ಅವರು ಯಾವುದೇ ಅಪರಾಧ ಮಾಡಿಲ್ಲ. ಆದರೆ, ರಾಜಕೀಯ ಉದ್ದೇಶಕ್ಕಾಗಿ ಅವರ ವೃತ್ತಿಪರ ಘನತೆಯನ್ನು ಹಾಳು ಮಾಡಲು ಅವರನ್ನು ಪ್ರಕರಣದಲ್ಲಿ ಆರೋಪಿ ಎಂಬಂತೆ ಬಿಂಬಿಸಲಾಗಿದೆ’ ಎಂದರು.

ADVERTISEMENT

‘ಮಧ್ಯಂತರ ಆದೇಶದ ಮೇರೆಗೆ ಅರ್ಜಿದಾರರು ವಿಚಾರಣೆಗೆ ಹಾಜರಾಗಿದ್ದು, ತನಿಖೆಗೂ ಸಹಕರಿಸಿದ್ದಾರೆ ಆದರೆ, ಪ್ರತಿವಾದಿಗಳು ಅವರು ತನಿಖೆಗೆ ಹಾಜರಾಗಿಲ್ಲ ಎಂದು ಹೇಳಿರುವುದು ಆಧಾರರಹಿತ ಆಪಾದನೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕು’ ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ‘ಆರೋಪಿ ಶ್ರೀಧರ್‌ ಕೆ. ಪೂಜಾರ್ ಪೊಲೀಸರ ತನಿಖೆಗೆ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೆ ಪೊಲೀಸರು ಆಕ್ಷೇಪಿಸಬಾರದು. ಇದೇ 8ರಂದು ಬೆಳಿಗ್ಗೆ 9 ಗಂಟೆಗೆ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಅವರನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ ₹2 ಲಕ್ಷ ಮೊತ್ತದ ಬಾಂಡ್ ಪಡೆದು ಬಿಡುಗಡೆ ಮಾಡಬೇಕು’ ಎಂದು ಆದೇಶಿಸಿ ಅರ್ಜಿ ವಿಲೇವಾರಿ ಮಾಡಿದರು.

ಏನಿದು ಪ್ರಕರಣ?: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದ ತಂಡದಲ್ಲಿ ಶ್ರೀಧರ್ ಪೂಜಾರ್ ಕೂಡ ಇದ್ದರು. ಈ ವೇಳೆ ಅವರು ಅಕ್ರಮ ಎಸಗಿರುವ ಆರೋಪ ಕೇಳಿಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಐಟಿ ಫೆಬ್ರುವರಿ 17 ರಂದು ಶ್ರೀಧರ್ ಪೂಜಾರ್ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಶ್ರೀಧರ್ ಪೂಜಾರಿ ಪರಾರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.