ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮೂವರು ಆರೋಪಿಗಳ ಮನೆಗಳ ಮೇಲೆ ಮಂಗಳವಾರ ದಾಳಿ ಮಾಡಿ ಶೋಧ ನಡೆಸಿದೆ. ಕೆಲವು ತಾಂತ್ರಿಕ ದಾಖಲೆಗಳನ್ನು ತನಿಖಾ ತಂಡವು ಜಪ್ತಿ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಲು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದ ಎಸ್‌ಐಟಿ ತಂಡವು ಪ್ರಮುಖ ಆರೋಪಿ ಹಾಗೂ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮನೆಯಲ್ಲಿ ಶೋಧ ನಡೆಸಿದೆ. ಹಗರಣಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಸಂಜಯನಗರ ನಿವಾಸಿ ಸುನೀಶ್ ಹೆಗ್ಡೆ, ಸದಾಶಿವನಗರದ ಪ್ರಸಿದ್ಧ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.
ಶ್ರೀಕಿಯನ್ನು ಇತ್ತೀಚೆಗೆ ವಿಚಾರಣೆ ನಡೆಸಲಾಗಿತ್ತು. ‘ನನ್ನನ್ನು ಬೆದರಿಸಿದ್ದ ಕೆಲವು ಪೊಲೀಸ್ ಅಧಿಕಾರಿಗಳು ಹಾಗೂ ಕೆಲವು ರಾಜಕಾರಣಿಗಳು, ನೂರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ’ ಎಂಬುದಾಗಿ ಶ್ರೀಕಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದ. ಅದಾದ ಮೇಲೆ ತನಿಖೆ ಚುರುಕುಗೊಂಡಿದೆ.
ಡಾರ್ಕ್‌ವೆಬ್ ಮೂಲಕ ವಿದೇಶದಿಂದ ‘ಹೈಡ್ರೊ ಗಾಂಜಾ’ ತರಿಸಿದ್ದ ಆರೋಪದಡಿ ಶ್ರೀಕಿ ಹಾಗೂ ಇತರರ ವಿರುದ್ಧ ಕೆಂಪೇಗೌಡ ನಗರ ಠಾಣೆಯಲ್ಲಿ 2020ರಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶ್ರೀಕಿ ಹಾಗೂ ಇತರರನ್ನು ಬಂಧಿಸಿದ್ದ ಸಿಸಿಬಿ ಅಧಿಕಾರಿಗಳು, 2 ಪೆನ್‌ಡ್ರೈವ್, ಹಾರ್ಡ್‌ಡಿಸ್ಕ್ ಹಾಗೂ ಆ್ಯಪಲ್ ಮ್ಯಾಕ್‌ಬುಕ್ ಜಪ್ತಿ ಮಾಡಿಕೊಂಡಿದ್ದರು. ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಹಾಗೂ ಅಂತರರಾಷ್ಟ್ರೀಯ ಗೇಮಿಂಗ್ ಆ್ಯಪ್‌ಗಳನ್ನು ಹ್ಯಾಕ್ ಮಾಡಿ ಬಿಟ್‌ಕಾಯಿನ್ ಮೂಲಕ ಹಣ ಲೂಟಿ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ, ಆರೋಪಪಟ್ಟಿ ಸಲ್ಲಿಸಿದ್ದರು.
ಬಿಟ್‌ಕಾಯಿನ್ ಹಗರಣದಲ್ಲಿ ಹಲವು ಪ್ರಭಾವಿಗಳ ಪಾತ್ರವಿರುವ ಆರೋಪವಿದೆ. ಈಗಿನ ಕಾಂಗ್ರೆಸ್ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿಗಳು ಮಾಹಿತಿ ಆಧರಿಸಿ ಕೆಲವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.