ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ‘ಸಂವಿಧಾನ ತಿರುಚಲು, ಅದನ್ನು ಬದಲಿಸಬೇಕೆಂದು ಆರೆಸ್ಸೆಸ್ ಮತ್ತು ಬಿಜೆಪಿ ನಿರಂತರ ಯತ್ನ ಮಾಡುತ್ತಿವೆ. ದೇಶದ ಸ್ವಾಯತ್ತ ಸಂಸ್ಥೆಗಳನ್ನು ಒಂದೊಂದಾಗಿ ನಾಶ ಮಾಡುತ್ತಾ ಅವುಗಳ ಶಕ್ತಿಯನ್ನು ಕುಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವದಲ್ಲಿ ಮಾತನಾಡಿದ ಅವರು, ‘ನಮ್ಮ ಸಂವಿಧಾನವು ಸಮಾನತೆ, ಭಾತೃತ್ವ, ಜಾತ್ಯತೀತತೆ, ನ್ಯಾಯ ತತ್ವಗಳಿಂದ ಕೂಡಿದೆ. ಸಂವಿಧಾನ ಅಸ್ತಿತ್ವದಲ್ಲಿ ಇರದಿದ್ದರೆ ನಾವು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಗುತ್ತಿರಲಿಲ್ಲ. ಅಂತಹ ಸಂವಿಧಾನವನ್ನೇ ಬದಲಿಸಲು ಬಿಜೆಪಿ ಮುಂದಾಗಿದೆ’ ಎಂದರು.
‘ಪ್ರಧಾನಿ ನರೇಂದ್ರ ಮೋದಿಯವರು ಆರೆಸ್ಸೆಸ್‌ನ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದು, ಅದರಿಂದ ನಮ್ಮ ದೇಶದ ನ್ಯಾಯಾಂಗಕ್ಕೆ, ಜಾತ್ಯತೀತತೆಗೆ ಪೆಟ್ಟು ಬೀಳುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎರಡಕ್ಕೂ ಧಕ್ಕೆ ಇದೆ. ದಿನೇ ದಿನೇ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಈ ಅನಾಹುತ ತಡೆಯಬೇಕಾದರೆ, ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು’ ಎಂದು ಹೇಳಿದರು.
ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ಈ ದೇಶದ ಸಾಲ ₹ 55 ಲಕ್ಷ ಕೋಟಿ ಇತ್ತು. ಬಿಜೆಪಿ ಸರ್ಕಾರ 10 ವರ್ಷಗಳಲ್ಲಿ ₹ 150 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಖರ್ಗೆ ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.