ADVERTISEMENT

ಸಿ.ಎಂ, ಹೆಗ್ಡೆ ವಿರುದ್ಧ ಬಿಜೆಪಿ ದೂರು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 14:35 IST
Last Updated 24 ಮಾರ್ಚ್ 2024, 14:35 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಬಿಜೆಪಿ ಶಾಸಕ ಸುರೇಶ್‌ಕುಮಾರ್‌ ನೇತೃತ್ವದ ನಿಯೋಗ ನೃಪತುಂಗಾ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ನೀಡಿತು.

ADVERTISEMENT

‘ರಾಜ್ಯದಲ್ಲಿ ಬಿಜೆಪಿ ಆಪರೇಷನ್‌ ಕಮಲದ ಯತ್ನ ಮುಂದುವರಿಸಿದೆ. ನಮ್ಮ ಶಾಸಕರಿಗೆ ₹50 ಕೋಟಿ ಆಮಿಷ ಒಡ್ಡಿದ್ದಾರೆ ಎಂಬ ಸುಳ್ಳು ಆರೋಪವನ್ನು ಮಾಡುವ ಮೂಲಕ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ’ ಎಂದು ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಸುರೇಶ್‌ಕುಮಾರ್‌ ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು. 

‘ಮುಖ್ಯಮಂತ್ರಿಯವರು ಚುನಾವಣಾ ಸಂದರ್ಭದಲ್ಲಿ ವಿರೋಧ‍ ಪಕ್ಷದ ತೇಜೋವಧೆ ಮಾಡುವ ದುರುದ್ದೇಶದಿಂದ ಯಾವುದೇ ಪುರಾವೆ ಒದಗಿಸದೇ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮ ಆರೋಪಕ್ಕೆ ಪುರಾವೆಗಳನ್ನು ನೀಡಬೇಕು. ಅವರ ಬೇಜವಾಬ್ದಾರಿ ಆರೋಪದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಇದೆ. ಅವರು ಬಿಜೆಪಿಯ ಕ್ಷಮೆ ಯಾಚಿಸಿ ತಮ್ಮ ಆರೋಪವನ್ನು ಹಿಂದಕ್ಕೆ ಪಡೆಯಬೇಕು ಮತ್ತು ಈ ಹೇಳಿಕೆ ವಿರುದ್ಧ ಕ್ರಮ ಜರುಗಿಸುವಂತೆ ಆಯೋಗವನ್ನು ಒತ್ತಾಯಿಸಿದ್ದೇವೆ’ ಎಂದರು.

ಹೆಗ್ಡೆಯಿಂದ ನೀತಿ ಸಂಹಿತೆ ಉಲ್ಲಂಘನೆ

ಉಡುಪಿ– ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರು ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸಪೂಜಾರಿ ಅವರ ವಿರುದ್ಧ ಹೇಳಿಕೆ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಮತ್ತೊಂದು ದೂರು ದಾಖಲಾಗಿದೆ.

‘ಶ್ರೀನಿವಾಸಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ, ಇಂಗ್ಲಿಷ್‌ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿ ಕಳಿಸಿದರೆ ದೆಹಲಿಯಲ್ಲಿ ಕೆಲಸಗಳು ಆಗುವುದಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ. ಇದು ಆಕ್ಷೇಪಾರ್ಹ. ಭಾಷೆಯ ಹೆಸರಿನಲ್ಲಿ ಮತ ಯಾಚಿಸಿ ಪ್ರತಿಸ್ಪರ್ಧಿ ಗೆಲ್ಲದಂತೆ ಹೇಳಿಕೆ ನೀಡಿದ ಜಯಪ್ರಕಾಶ್‌ ಹೆಗ್ಡೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಮನವಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.