
ಬೆಂಗಳೂರು: ‘ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಮತ್ತು ಸುಳ್ಳು ಸುದ್ದಿಯ ಪೋಸ್ಟರ್‌ಗಳನ್ನು ಹಾಕಿ ದಂಗೆಗೆ ಪ್ರಚೋದನೆ ನೀಡುತ್ತಿದ್ದಾರೆ’ ಎಂದು ಕಬ್ಬನ್ ಪಾರ್ಕ್ ಪೊಲೀಸರಿಗೆ ಬಿಜೆಪಿ ದೂರು ನೀಡಿದೆ.
‘ಪ್ರಧಾನಿಯವರ ಭಾವಚಿತ್ರವನ್ನು ಬಳಸಿ, ‘ದೇಶದ ಸಂಸತ್ತಿಗೆ ಬರಲು ಧೈರ್ಯವಿಲ್ಲದ ಪುಕ್ಕಲ ಪ್ರಧಾನಿ ದೇಶವನ್ನು ಹೇಗೆ ರಕ್ಷಿಸುತ್ತಾರೆ?’ ಎಂಬ ಅಪಪ್ರಚಾರದ ಬ್ಯಾನರ್‌ಗಳನ್ನು ವಿಧಾನಸೌಧದ ಮುಂದೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದೆ.
‘ಈ ಮೂಲಕ ಪ್ರಧಾನಮಂತ್ರಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಂಚು ರೂಪಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು, ರಾಜಕೀಯ ದಂಗೆ ನಡೆಸುವ ಸಂಚನ್ನು ಕಾಂಗ್ರೆಸ್ ಪದಾಧಿಕಾರಿಗಳು ರೂಪಿಸಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದೆ.
ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಮುನಿರಾಜ್ ಗೌಡ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.