ADVERTISEMENT

ಅರುಣ್‌ಸಿಂಗ್‌ ಇಂದು ನಗರಕ್ಕೆ; ಸಚಿವಕಾಂಕ್ಷಿಗಳಲ್ಲಿ ಗರಿಗೆದರಿದ ಉತ್ಸಾಹ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌; ನಾಳೆ ಶಿವಮೊಗ್ಗದಲ್ಲಿ ಕೋರ್‌ ಕಮಿಟಿ ಸಭೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 9:40 IST
Last Updated 1 ಜನವರಿ 2021, 9:40 IST
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌   

ಬೆಂಗಳೂರು: ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಡೆಯುವ ರಾಜ್ಯ ಬಿಜೆಪಿ ಪ್ರಮುಖ ನಾಯಕರ ಸಭೆ ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ಅವರು ಇಂದು ಸಂಜೆ ನಗರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸಚಿವಕಾಂಕ್ಷಿಗಳಲ್ಲಿ ಉತ್ಸಾಹ ಗರಿಗೆದರಿದೆ.

ಈ ಬಾರಿಯಾದರೂ ಸಚಿವ ಸಂಪುಟ ವಿಸ್ತರಣೆಗೆ ಅವಕಾಶ ನೀಡುವ ಸಂದೇಶ ತರಬಹುದು ಎಂಬ ಕಾತರದಲ್ಲಿ ಆಕಾಂಕ್ಷಿಗಳು ಕಾಯುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಉತ್ತಮ ಸಾಧನೆ ತೋರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಪ್ರಸ್ತಾಪ ಮುಂದಿಡಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಅಲ್ಲದೆ, ಕಳೆದ ಒಂದು ವರ್ಷದಲ್ಲಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಕೈಗೊಳ್ಳಲಿರುವ ಕಾರ್ಯಗಳ ಬಗ್ಗೆ ಸಭೆಯಲ್ಲಿ ಮುಖ್ಯಮಂತ್ರಿ ಪ್ರಸ್ತಾವ ಮುಂದಿಡಲಿದ್ದು, ಈ ಸಂಬಂಧ ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿಗಳನ್ನು ಪಡೆದರು.

ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆಯ ಸಾಧನೆ ಮತ್ತು ಅದರಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಕರೆಸಿ ಅಭಿನಂದನೆ ಸಲ್ಲಿಸುವ ಕಾರ್ಯ ಕ್ರಮವೊಂದನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ಕಳೆದ ಪಕ್ಷದ ಪ್ರಮುಖರ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿದಂತೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿಧಾನಸಭೆಯಲ್ಲಿ ಅಂಗೀಕಾರ ಪಡೆದು, ಸುಗ್ರೀವಾಜ್ಞೆ ಹೊರಡಿಸಲಾಗಿದ್ದನ್ನು ಸಭೆಯಲ್ಲಿ ಅರುಣ್‌ ಸಿಂಗ್‌ ಅವರ ಗಮನಕ್ಕೆ ತರಲಾಗುವುದು. ಮುಂದೆ ‘ಲವ್‌ ಜಿಹಾದ್‌’ ತಡೆಗೆ ಕಾಯ್ದೆ ತರುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ಅರುಣ್‌ ಸಿಂಗ್‌ ಅವರು ಇಂದು ರಾತ್ರಿ 8.30 ಕ್ಕೆ ನಗರಕ್ಕೆ ಬರಲಿದ್ದು, ಕುಮಾರಕೃಪಾ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಕಾರ್ಯಕರ್ತರು ಮತ್ತು ಪ್ರಮುಖ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ನಾಳೆ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆಗೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ರಾತ್ರಿ 8 ಕ್ಕೆ ಕೋರ್‌ ಕಮಿಟಿ ಸಭೆ ನಡೆಯಲಿದೆ. ಭಾನುವಾರ ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ಪಕ್ಷದ ರಾಜ್ಯ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.