ಬಿಜೆಪಿ
ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಪ್ರಮಾಣದ ಹಂಚಿಕೆ ಕುರಿತು ತೆಗೆದುಕೊಂಡ ನಿರ್ಣಯವನ್ನು ಜಾರಿಗೆ ತರುವಂತೆ ಒತ್ತಾಯಿಸಿ ರಾಜ್ಯ ವ್ಯಾಪಿ ಜನಾಂದೋಲನ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಪಕ್ಷದ ಪ್ರಮುಖ ನಾಯಕರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಬಿಜೆಪಿ ಸರ್ಕಾರದ ಸಚಿವ ಸಂಪುಟ ಸಭೆ ಒಳಮೀಸಲಾತಿ ಕುರಿತು ನ್ಯಾಯೋಚಿತ ತೀರ್ಮಾನ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಬೇಕು. ಅದಕ್ಕಾಗಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಒತ್ತಾಯಿಸಲು ತೀರ್ಮಾನಿಸಲಾಯಿತು.
‘ಅಲ್ಲದೇ, ರಾಜ್ಯದ ಜನರಿಗೆ ಸರಿಯಾದ ಮಾಹಿತಿಯನ್ನು ತಲುಪಿಸುವ ಕೆಲಸ ಮಾಡಬೇಕು. ನಮ್ಮ ಸರ್ಕಾರ ಇದ್ದಾಗ, ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೆವು. ಅದರಿಂದ ಪಕ್ಷಕ್ಕೆ ವಿಧಾನಸಭಾ ಚುನಾವಣೆಯಲ್ಲೂ ಹಿನ್ನಡೆ ಆಗಿತ್ತು. ಆಗ ಕೆಲವು ಸ್ಥಾಪಿತ ಹಿತಾಸಕ್ತಿಗಳು ಅಪಪ್ರಚಾರ ನಡೆಸಿ ಜನರಲ್ಲಿ ಗೊಂದಲ ಮೂಡಿಸಿದರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಹೇಳಿದರು’ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ಬೊಮ್ಮಾಯಿ ಸರ್ಕಾರ ಕೇಂದ್ರಕ್ಕೆ ಮಾಡಿದ ಶಿಫಾರಸ್ಸನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೊಳಿಸಬೇಕು. ಸದ್ಯದಲ್ಲೇ ಬಿಜೆಪಿ ನಾಯಕರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜಾರಿಗಾಗಿ ಒತ್ತಾಯಿಸಲಿದ್ದೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.