ADVERTISEMENT

ಬಿಜೆಪಿ ಸರ್ಕಾರದಿಂದ ರೈತರ ಬೆನ್ನಿಗೆ ಚೂರಿ: ಎಚ್‌ಡಿ ಕುಮಾರಸ್ವಾಮಿ

ಟ್ವಿಟರ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 16:35 IST
Last Updated 11 ಏಪ್ರಿಲ್ 2021, 16:35 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ‘ರಸಗೊಬ್ಬರ ದರ ಹೆಚ್ಚಳ ಮಾಡುವ ಮೂಲಕ ಬಿಜೆಪಿ ಸರ್ಕಾರ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ‘ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್‌ ನಡೆಸಿತ್ತು. ಈಗ ರಸಗೊಬ್ಬರದ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ. ಈಗ ಕೇಂದ್ರದ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು’ ಎಂದು ಟೀಕಿಸಿದ್ದಾರೆ.

‘ರಸಗೊಬ್ಬರಕ್ಕೆ ನೀಡುತ್ತಿದ್ದ ಸಬ್ಸಿಡಿಯಲ್ಲಿ ಶೇ 50ರಷ್ಟು ಕಡಿತ ಮಾಡಲಾಗಿದೆ. ಈಗ ಸದಾನಂದಗೌಡರು ಪ್ರಧಾನಿ ನರೇಂದ್ರ ಮೋದಿ ಜತೆ ಮಾತನಾಡಿ ರಸಗೊಬ್ಬರ ಸಬ್ಸಿಡಿಗಾಗಿ ₹ 1.5 ಲಕ್ಷ ಕೋಟಿ ಅನುದಾನ ಕೊಡಿಸಬೇಕು. ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ದರ ಹೆಚ್ಚಳವನ್ನು ವಾಪಸ್ ಪಡೆಯಿರಿ’ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.