ADVERTISEMENT

ಬಿಜೆಪಿಯಿಂದ ಬೃಹತ್‌ ರೈತರ ಪ್ರತಿಭಟನಾ ಸಮಾವೇಶ

ಅಧಿವೇಶನ; ಮೊದಲ ದಿನ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧತೆ;

ಶ್ರೀಕಾಂತ ಕಲ್ಲಮ್ಮನವರ
Published 9 ಡಿಸೆಂಬರ್ 2018, 19:45 IST
Last Updated 9 ಡಿಸೆಂಬರ್ 2018, 19:45 IST
   

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನದ ವೇಳೆ ಸದನದ ಹೊರಗೂ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ರೈತರ ಸಮಸ್ಯೆಗಳನ್ನು ಇಟ್ಟುಕೊಂಡು ಮೊದಲ ದಿನ ಸೋಮವಾರ ಇಲ್ಲಿನ ಅಲಾರವಾಡ ಕ್ರಾಸ್‌ ಬಳಿಯ ಮಾಲಿನಿ ಸಿಟಿಯಲ್ಲಿ ಬೃಹತ್‌ ರೈತರ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ.

ಸ್ಥಳೀಯ ರೈತರ ಜೊತೆ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಜನರನ್ನು ಸೇರಿಸಲು ಬಿಜೆಪಿ ಮುಂದಾಗಿದೆ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಎಲ್ಲ ರೀತಿಯ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಮಾತಿನಂತೆ ನಡೆದುಕೊಂಡಿಲ್ಲ. ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ರೈತರ ಸಾಲ ಮನ್ನಾ ಆಗಿಲ್ಲ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ಸಮಾವೇಶ ಉಸ್ತುವಾರಿ ಹೊತ್ತಿರುವ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಸವದಿ ಹೇಳಿದರು.

ಸಮಾವೇಶದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ‘ಮುಖ್ಯಮಂತ್ರಿ ಆಗಿ ಮುಂದುವರಿಯಲು ನೈತಿಕ ಹಕ್ಕಿಲ್ಲ, ಕೆಲಸ ಮಾಡಲು ಆಗಲ್ಲ ಅಂದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ನಾಟಿ ಮಾಡೋಕೆ, ಭತ್ತ ಕಟಾವು ಮಾಡೋಕೆ ಅಲ್ಲ ಮುಖ್ಯಮಂತ್ರಿ ಆಗಿರೋದು’ ಎಂದು ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಚುಚ್ಚಿದ್ದಾರೆ.

ADVERTISEMENT

ಸರಣಿ ಪ್ರತಿಭಟನೆ:

ಕಬ್ಬು ಬೆಳೆಗಾರರ ಸಂಘ, ಭಾರತೀಯ ಕೃಷಿಕ ಸಮಾಜ (ಸಂಯುಕ್ತ), ಕರ್ನಾಟಕ ರಾಜ್ಯ ರೈತ ಸಂಘಟನೆ– ಹಸಿರು ಸೇನೆ, ಅಂಗನವಾಡಿ ಕಾರ್ಯಕರ್ತೆಯರ ಸಂಘ, ಆದಿವಾಸಿಗಳ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ಸೇರಿದಂತೆ 39 ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರತ್ಯೇಕತೆಯ ಕಿಡಿ:

ಪ್ರಮುಖ ಇಲಾಖೆಗಳ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿ, ಸುವರ್ಣ ವಿಧಾನಸೌಧದ ಎದುರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲಾಗುವುದು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಹೇಳಿಕೆ ನೀಡಿರುವುದು ಪ್ರತಿಭಟನೆಗಳ ಕಾವು ಹೆಚ್ಚಿಸಿದೆ.

ಮಹಾಮೇಳಾವ್‌ಗೆ ಸಿದ್ಧತೆ:

ಬೆಳಗಾವಿಯಲ್ಲಿ ಅಧಿವೇಶನ ನಡೆಸಬಾರದೆಂದು ಒತ್ತಾಯಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಸೋಮವಾರ ಇಲ್ಲಿನ ವ್ಯಾಕ್ಸಿನ್‌ ಡಿಪೋ ಬಳಿ ಮಹಾಮೇಳಾವ್‌ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಮಹಾರಾಷ್ಟ್ರದ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಧನಂಜಯ ಮುಂಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.