ADVERTISEMENT

ಬಿಜೆಪಿ ‘ಜನೋತ್ಸವ’ ಮತ್ತೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 13:45 IST
Last Updated 17 ಆಗಸ್ಟ್ 2022, 13:45 IST
   

ಬೆಂಗಳೂರು: ಇದೇ 28 ರಂದು ಬಿಜೆಪಿ ನಡೆಸಲು ಉದ್ದೇಶಿಸಿದ್ದ ‘ಜನೋತ್ಸವ’ವನ್ನು ಮುಂದೂಡಲಾಗಿದ್ದು, ಸೆಪ್ಟೆಂಬರ್‌ 11 ಕ್ಕೆ ನಡೆಸುವ ಸಾಧ್ಯತೆ ಇದೆ.

ಬೊಮ್ಮಾಯಿ ಸರ್ಕಾರದ ಒಂದು ವರ್ಷದ ಸಾಧನೆಯನ್ನು ಬಿಂಬಿಸುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಆ. 30 ಮತ್ತು 31 ರಂದು ಗೌರಿ– ಗಣೇಶ ಹಬ್ಬ ಇರುವುದರಿಂದ ಪಕ್ಷದ ಕಾರ್ಯಕರ್ತರು, ಶಾಸಕರು ಮತ್ತು ಸಚಿವರಿಗೆ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮುಂದೂಡಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಈ ಹಿಂದೆ ಜುಲೈ 28 ರಂದು ಜನೋತ್ಸವ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಸುಳ್ಯ ತಾಲ್ಲೂಕು ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ನಡೆದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸಲಾಗಿತ್ತು.

ADVERTISEMENT

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ:

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ಸಭೆ ಗುರುವಾರ ಪಕ್ಷದ ಕಚೇರಿಯಲ್ಲಿ ನಡೆಯಲಿದ್ದು, ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌ ಅವರು ಭಾಗವಹಿಸಲಿದ್ದಾರೆ.

ಮುಂಬರುವ ಬಿಬಿಎಂಪಿ ಮತ್ತು ವಿಧಾನಸಭಾ ಚುನಾವಣೆ, ಸಂಘಟನೆ ಬಲಪಡಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಸಭೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಮತ್ತು ಇತರ ಪದಾಧಿಕಾರಿಗಳು ಮತ್ತು ಮುಖ್ಯಮಂತ್ರಿಯವರು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.