ADVERTISEMENT

ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ಶೀಘ್ರ ರಚನೆ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 11:16 IST
Last Updated 21 ಅಕ್ಟೋಬರ್ 2025, 11:16 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ಬೆಂಗಳೂರು: ಬಿಜೆಪಿ- ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಿದ್ದಾಗಿ ಹೇಳಿದರು. 8-10 ದಿನಗಳಲ್ಲಿ ಕುಮಾರಸ್ವಾಮಿಯವರು ಹೆಸರುಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು.

ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡೋಣ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಹೆಚ್.ಡಿ ಕುಮಾರಸ್ವಾಮಿ ಅವರು ನೀಡಿದ್ದಾರೆ ಎಂದು ವಿವರಿಸಿದರು.

ADVERTISEMENT

ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿ ಹದಗೆಟ್ಟಿದೆ. ಬೆಂಗಳೂರು, ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ. ಅಭಿವೃದ್ಧಿ ಇಲ್ಲದೇ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬೆಂಗಳೂರು ಮಹಾನಗರದ ಅವ್ಯವಸ್ಥೆಯನ್ನು ತಾವೇ ನೋಡುತ್ತಿದ್ದೀರಿ ಎಂದು ನುಡಿದರು.

ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದ ಯಡಿಯೂರಪ್ಪ:

ರಾಜ್ಯ ಸರಕಾರ, ಸಚಿವರು ಅಹಂಕಾರದಿಂದ ಮೆರೆಯುತ್ತಿದ್ದಾರೆ. ಮೋಹನ್‍ದಾಸ್ ಪೈ, ಕಿರಣ್ ಮಜುಂದಾರ್ ಷಾ ಅವರಂಥ ಹಿರಿಯರು ಬೆಂಗಳೂರಿನ ಬಗ್ಗೆ ಮತ್ತು ರಸ್ತೆಗಳ ಕುರಿತು ಸಲಹೆ ನೀಡಿದರೆ, ಆ ಸಲಹೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ; ಅಂಥ ಹಿರಿಯರನ್ನು ಸ್ವತಃ ಸಚಿವರೇ ನಿಂದಿಸುತ್ತಿದ್ದಾರೆ; ಇದು ರಾಜ್ಯ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಇದೇ ರೀತಿ ಟೀಕೆ, ಸಲಹೆಗಳು ಬಂದಿದ್ದವು. ಯಡಿಯೂರಪ್ಪ ಅವರು ಮೋಹನ್‍ದಾಸ್ ಪೈ ಅವರನ್ನು ಮನೆಗೆ ಕರೆಸಿಕೊಂಡು ಟೀ ಕುಡಿಸಿ ಅವರ ಸಲಹೆಗಳನ್ನು ಪಡೆದಿದ್ದರು. ಟೀಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದರು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.