ADVERTISEMENT

ವಿಧಾನಸೌಧ: ಸರ್ಕಾರದ ವಿರುದ್ಧ ಬಿಜೆಪಿ–ಜೆಡಿಎಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 14:33 IST
Last Updated 11 ಆಗಸ್ಟ್ 2025, 14:33 IST
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಕರಣ ಸೇರಿ ವಿವಿಧ ಪ್ರಕರಣಗಳಲ್ಲಿ ಸರ್ಕಾರ ಹೊಣೆಗಾರಿಕೆ ವಹಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.
ಚಿತ್ರ:ರಂಜು ಪಿ
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಕರಣ ಸೇರಿ ವಿವಿಧ ಪ್ರಕರಣಗಳಲ್ಲಿ ಸರ್ಕಾರ ಹೊಣೆಗಾರಿಕೆ ವಹಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಚಿತ್ರ:ರಂಜು ಪಿ    

ಬೆಂಗಳೂರು: ‘ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಘಟನೆ  ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ’ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿರೋಧಪಕ್ಷದ ನಾಯಕ ಆರ್‌.ಅಶೋಕ, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಸೇರಿ ಎರಡೂ ಪಕ್ಷಗಳ ಶಾಸಕರು ಭಾಗವಹಿಸಿದ್ದರು.

‘ಕಾಲ್ತುಳಿತದ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವ ಮತ್ತು ಇತರ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಇವರ ಹುಳುಕುಗಳನ್ನು ಮುಚ್ಚಿ ಹಾಕುವ ಸಲುವಾಗಿ ಪೊಲೀಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದ್ದಾರೆ’ ಎಂದು ವಿಜಯೇಂದ್ರ ಆರೋಪಿಸಿದರು.

ADVERTISEMENT

‘ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಸಂತ್ರಸ್ತರಿಗೆ ಪರಿಹಾರ ನೀಡುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ’ ಎಂದು ಹೇಳಿದರು.

ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಇದ್ದರು.

ಗವಿಸಿದ್ದಪ್ಪ ಹತ್ಯೆ: ಎನ್‌ಐಎಗೆ ವಹಿಸಲು ಆಗ್ರಹ

ಕೊಪ್ಪಳದಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಂಘಟನೆಯ ಮುಖಂಡ ಗವಿಸಿದ್ದಪ್ಪ ನಾಯಕ ಅವರ ಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎಗೆ ಒಪ್ಪಿಸಬೇಕು ಎಂದು ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ವಾಲ್ಮೀಕಿ ಸಮುದಾಯದ ನಾಯಕರೂ ಆಗಿದ್ದ ಗವಿಸಿದ್ದಪ್ಪ ಅವರ ಹತ್ಯೆ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಬಾರದು. ಈ ಘಟನೆಯಿಂದ ಇಡೀ ಕೊಪ್ಪಳ ಜಿಲ್ಲೆಯೇ ಆತಂಕಕ್ಕೆ ಒಳಗಾಗಿದೆ ಎಂದರು. ‘ಹಿಂದೂ ಕಾರ್ಯಕರ್ತರನ್ನು ಗುರಿ ಮಾಡಿ ಕೊಲ್ಲುವ ಸಮಾಜಘಾತುಕ ಮತ್ತು ದೇಶ ದ್ರೋಹಿಗಳ ಚಟುವಟಿಕೆ ಹಿಂದೆ ಕರಾವಳಿ ಭಾಗದಲ್ಲಿತ್ತು. ಈಗ ಅದು ಕೊಪ್ಪಳ ಜಿಲ್ಲೆಗೂ ವಿಸ್ತರಣೆ ಆಗಿದೆ. ಗೃಹ ಸಚಿವರು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು. ವಿಧಾನಸಭೆ ವಿರೋಧಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಶಾಸಕ ಜಿ.ಜನಾರ್ದನ ರೆಡ್ಡಿ ಅವರು ಮಾತನಾಡಿ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.