ಬೆಂಗಳೂರು: ‘ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗದ ವರದಿ ಮೂಲಕ ಒಳ ಮೀಸಲಾತಿ ವಿಚಾರದಲ್ಲಿ ಗೊಂದಲು ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮಾದಿಗರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಬಿಜೆಪಿಯ ಎ.ನಾರಾಯಣಸ್ವಾಮಿ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳಮೀಸಲಾತಿ ಜಾರಿಯನ್ನು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಾರಿಯ ಅಧಿವೇಶನ ಮುಗಿಯುವ ಒಳಗೆ ಒಳ ಮೀಸಲಾತಿ ಜಾರಿ ಮಾಡದೇ ಇದ್ದಲ್ಲಿ, ಕಾಂಗ್ರೆಸ್ ಸರ್ಕಾರದ ಮೇಲಿನ ಈ ಅಪನಂಬಿಕೆ ಮತ್ತಷ್ಟು ಗಟ್ಟಿಯಾಗಲಿದೆ’ ಎಂದರು.
‘ಮಾದಿಗ ಸಮುದಾಯದ ಸಂಘಟನೆಗಳು, ಜನರು, ಉದ್ಯಮಿಗಳು, ವಿದ್ಯಾರ್ಥಿಗಳನ್ನು ಒಳಗೊಂಡು ಸಭೆ ನಡೆಸಲಾಗಿದೆ. ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚಿಸಲಾಗಿದೆ. ಎಲ್ಲರೂ ಒಳಗೊಂಡು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಆಗಸ್ಟ್ 1ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸುತ್ತೇವೆ’ ಎಂದರು.
‘ಮಾದಿಗರು ಹೋರಾಟ ನಡೆಸುವ ಅವಶ್ಯಕತೆ ಇಲ್ಲ ಎಂದು ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ ಅವರು ಹಾದಿತಪ್ಪಿಸುವಂತಹ ಮಾತುಗಳನ್ನಾಡುತ್ತಿದ್ದಾರೆ. ಅವರ ಮಾತುಗಳನ್ನು ನಂಬಬಾರದು. ಸಮುದಾಯದ ನಾಯಕರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋರಾಟವನ್ನು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.