ADVERTISEMENT

ಮೀಸಲಾತಿ ಹೆಚ್ಚಳ: ಅನುಷ್ಠಾನ ನಿಶ್ಚಿತ– ಸಚಿವ ಬಿ.ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 11:17 IST
Last Updated 28 ಅಕ್ಟೋಬರ್ 2022, 11:17 IST
   

ತುಮಕೂರು: ಪರಿಶಿಷ್ಟ ಜಾತಿ, ಪಂಗಡದವರಿಗೆ ಹೆಚ್ಚಳ ಮಾಡಿರುವ ಮೀಸಲಾತಿ ಜಾರಿಗೆ ಬರುವಂತೆ ರಾಜ್ಯ, ಕೇಂದ್ರದಲ್ಲಿ ಇರುವ ಬಿಜೆಪಿ ನೇತೃತ್ವದ ಸರ್ಕಾರಗಳು ನೋಡಿಕೊಳ್ಳಲಿವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಇಲ್ಲಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು.

ನವೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಹಮ್ಮಿಕೊಂಡಿರುವ ಪರಿಶಿಷ್ಟ ಪಂಗಡದವರ ಸಮಾವೇಶದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಯಾರಾದರೂ ಪ್ರಶ್ನಿಸಿದರೂ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಸಂವಿಧಾನ ತಿದ್ದುಪಡಿಯೂ ಸೇರಿದಂತೆ ರಾಜ್ಯ, ಕೇಂದ್ರ ಸರ್ಕಾರಗಳು ಅಗತ್ಯ ‘ಸಹಕಾರ’ ನೀಡಲಿವೆ. ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರ ಒಪ್ಪಿಗೆಯೂ ಸಿಕ್ಕಿದೆ. ಸರ್ಕಾರದ ನಿರ್ಧಾರದಂತೆ ಜಾರಿಯಾಗಲಿದೆ ಎಂದು ಹೇಳಿದರು.‌

ADVERTISEMENT

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ‘ಮೀಸಲಾತಿ ಹೆಚ್ಚಳ ಮಾಡಿದ ನಂತರ ಸಿದ್ದರಾಮಯ್ಯ ಅವರಿಗೆ ನಿದ್ದೆ ಬರುತ್ತಿಲ್ಲ. ಸರ್ವಪಕ್ಷಗಳ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಹಮತ ವ್ಯಕ್ತಪಡಿಸಿ, ಹೊರಗೆ ಬಂದು ಅದರ ವಿರುದ್ಧ ಮಾತನಾಡುತ್ತಿದ್ದಾರೆ. ಕನಕದಾಸರ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಬಂದವರು, ತಾಕತ್ತಿದ್ದರೆ ಅಧಿಕಾರದಲ್ಲಿ ಇದ್ದಾಗ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಬೇಕಿತ್ತು’ ಎಂದು ಗುಡುಗಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಒಂದು ರೀತಿಯಲ್ಲಿ ನಾಟಕೀಯವಾಗಿ ನಡೆಯಿತು. ಈ ನಾಟಕದಲ್ಲಿ ರಾಜ್ಯ ನಾಯಕರು ಪಾತ್ರದಾರಿಗಳಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಈ ಪಾತ್ರದಾರಿಗಳ ಮೂಲಕ ಮೀಸಲಾತಿ ಹೆಚ್ಚಳ ಮಾಡಿಸಲು ರಾಹುಲ್ ಗಾಂಧಿ ಪ್ರಯತ್ನ ಮಾಡಲಿಲ್ಲ. ಪರಿಶಿಷ್ಟರು, ಹಿಂದುಳಿದವರ ಹೆಸರು ಹೇಳಿಕೊಂಡು ಬಂದ ರಾಜ್ಯ ನಾಯಕರು, ಆ ಸಮುದಾಯಗಳಿಗೆ ಏನೂ ಮಾಡಲಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ತಿರಸ್ಕಾರಕ್ಕೆ ಒಳಗಾದ ಪಕ್ಷ’ ಎಂದು ವಾಗ್ದಾಳಿ ನಡೆಸಿದರು.

‘ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ನ. 20ರಂದು ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡದವರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಪ್ರವಾಸ ಮಾಡಿ ಸಮಾವೇಶಕ್ಕೆ ಬರುವಂತೆ ಪಕ್ಷಾತೀತವಾಗಿ ವಾಲ್ಮೀಕಿ ಸಮುದಾಯದವರಿಗೆ ಆಹ್ವಾನ ನೀಡಲಾಗುತ್ತಿದೆ. ಬೇರೆ ಪಕ್ಷಗಳಲ್ಲಿ ಇರುವ ಸಮುದಾಯದವರು, ಆ ಪಕ್ಷ ತೊರೆದು ಹೊರ ಬರುವಂತೆ ಮನವಿ ಮಾಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.