ಬೆಂಗಳೂರು: ಖಾಸಗಿ ಕಾರ್ಯನಿಮಿತ್ತ ಬೆಂಗಳೂರಿಗೆ ಬಂದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಮಂಗಳೂರು, ಕಲಬುರಗಿ ಘಟನೆಗಳ ಕುರಿತು ಚರ್ಚೆ ನಡೆಸಿದರು.
ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗುತ್ತಿದೆ. ಪೊಲೀಸ್ ಗೂಂಡಾಗಿರಿ ಹೆಚ್ಚಾಗಿದೆ. ಆರ್‌ಎಸ್‌ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಧರ್ಮದ ಹಲವು ಮುಖಂಡರು, ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೆಲವರನ್ನು ಗಡೀಪಾರು ಮಾಡಲಾಗಿದೆ. ಪಾಳೇಗಾರರ ಕಾಲದ ಆಡಳಿತ ರಾಜ್ಯದಲ್ಲಿದೆ. ಪ್ರಜಾಪ್ರಭುತ್ವ ಇಲ್ಲವಾಗಿದೆ. ಸರ್ಕಾರದ ಇಂತಹ ನಡವಳಿಕೆ ವಿರುದ್ಧ ಬಿಜೆಪಿ ಗಟ್ಟಿ ಧ್ವನಿ ಎತ್ತಿದೆ. ಜನರ ಪರವಾಗಿ ನಿಂತಿದೆ ಎಂದು ಮಾಹಿತಿ ನೀಡಿದರು.
ಕಲಬುರಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಚಿತ್ತಾಪುರ ಪ್ರವಾಸಿ ಮಂದಿರದಲ್ಲಿ ದಿಗ್ಬಂಧನ ಹಾಕಿದ ಘಟನೆ, ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿರುವುದು, ಇದರ ವಿರುದ್ಧ ಬಿಜೆಪಿ ತೆಗೆದುಕೊಂಡ ನಿರ್ಧಾರಗಳನ್ನು ನಡ್ಡಾ ಅವರಿಗೆ ವಿವರಿಸಿದರು.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, ‘ಮಂಗಳೂರಿನ ಸ್ಥಿತಿಗತಿ, ಕಲಬುರಗಿ ಘಟನೆಗಳ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ವಿವರ ನೀಡಿದ್ದೇವೆ. ಪಕ್ಷದ ನಾಯಕರ ಸಂಘಟನಾತ್ಮಕ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.