ADVERTISEMENT

ಬಿಜೆಪಿಗೆ ಕಗ್ಗಂಟಾದ ವಿರೋಧ ಪಕ್ಷದ ನಾಯಕನ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 20:38 IST
Last Updated 8 ಜೂನ್ 2023, 20:38 IST
   

ಬೆಂಗಳೂರು: ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಬಿಜೆಪಿಯಲ್ಲಿ ಕಗ್ಗಂಟು ಮುಂದುವರಿದಿದೆ. ಈ ವಿಚಾರದಲ್ಲಿ ಶಾಸಕರ ವೈಯಕ್ತಿಕ ಅಭಿಪ್ರಾಯ ಸಂಗ್ರಹಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಅದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಗುರುವಾರ ನಡೆದ ಆತ್ಮಾವಲೋಕನ ಸಭೆಯ ಬಳಿಕ ಅರುಣ್‌ ಸಿಂಗ್‌ ಎಲ್ಲ ಶಾಸಕರನ್ನೂ ಪ್ರತ್ಯೇಕವಾಗಿ ಭೇಟಿಮಾಡಿ ಅಭಿಪ್ರಾಯ ಆಲಿಸಿದ್ದಾರೆ. ವಿರೋಧ ಪಕ್ಷದ ನಾಯಕರನ್ನಾಗಿ ಯಾರನ್ನು ಆಯ್ಕೆ ಮಾಡಿದರೆ ಪಕ್ಷಕ್ಕೆ ಅನುಕೂಲ ಆಗಬಹುದು ಎಂಬ ಪ್ರಶ್ನೆಯನ್ನು ಮುಂದಿಟ್ಟು ಉತ್ತರ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ವಿ. ಸುನಿಲ್‌ ಕುಮಾರ್‌ ಸೇರಿದಂತೆ ಕೆಲವರ ಹೆಸರುಗಳನ್ನು ಶಾಸಕರು ಸಲಹೆ ಮಾಡಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಉಪ ನಾಯಕನ ಆಯ್ಕೆ ಸಂದರ್ಭದಲ್ಲಿ ಎರಡೂ ಕಡೆ ತಲಾ ಒಂದು ಸ್ಥಾನವನ್ನು ಕಟು ಹಿಂದುತ್ವ ಪ್ರತಿಪಾದಕರಿಗೆ ನೀಡಬೇಕು ಎಂಬ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT
ಪ್ರಮುಖರ ಸಮಿತಿ ಸಭೆ ರದ್ದು:
ಆತ್ಮಾವಲೋಕನ ಸಭೆ ಬಳಿಕ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯೂ ನಿಗದಿಯಾಗಿತ್ತು. ಆದರೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಕೆಲವರು ಬಾರದ ಕಾರಣ ಈ ಸಭೆಯನ್ನು ರದ್ದುಗೊಳಿಸಲಾಯಿತು.

ಜುಲೈ 3ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ಬಿಜೆಪಿ ವರಿಷ್ಠರೇ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಪ್ರಕಟಿಸಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಕುರಿತಂತೆ ಗುರುವಾರ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.