ADVERTISEMENT

ಕನ್ಹಯ್ಯ ಹಂತಕರಿಗೆ ಕಠಿಣ ಶಿಕ್ಷೆಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 19:44 IST
Last Updated 2 ಜುಲೈ 2022, 19:44 IST
ರಾಜಸ್ಥಾನದ ಉದಯಪುರದಲ್ಲಿ ದರ್ಜಿ ಕನ್ಹಯ್ಯ ಲಾಲ್‌ ಅವರನ್ನು ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು– ಪ್ರಜಾವಾಣಿ ಚಿತ್ರ
ರಾಜಸ್ಥಾನದ ಉದಯಪುರದಲ್ಲಿ ದರ್ಜಿ ಕನ್ಹಯ್ಯ ಲಾಲ್‌ ಅವರನ್ನು ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು– ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ದರ್ಜಿ ಕನ್ಹಯ್ಯ ಲಾಲ್‌ ಅವರನ್ನು ಶಿರಚ್ಛೇದ ಮಾಡಿ ಹತ್ಯೆಗೈದಿರುವ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಸೈಯದ್‌ ಸಲಾಂ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷ ಮೊಹ್ಸಿನ್‌, ಮಾಧ್ಯಮ ಸಂಚಾಲಕ ಮೊಹಿಯುದ್ದೀನ್‌ ಸೇರಿದಂತೆ ಹಲವು ಮುಖಂಡರು, ನೂರಾರು ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್‌ ಸದಸ್ಯ ಹಾಗೂ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್‌, ಕಾರ್ಯದರ್ಶಿ ಜಗದೀಶ ಹಿರೇಮನಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರವಿಕುಮಾರ್‌, ‘ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರ ಕನ್ಹಯ್ಯ ಲಾಲ್‌ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಬಡ ದರ್ಜಿಯನ್ನು ಹತ್ಯೆ ಮಾಡಿರುವ ಹಂತಕರು, ಪ್ರಧಾನಿ ನರೇಂದ್ರ ಮೋದಿ ಅವರಿಗೂ ಜೀವ ಬೆದರಿಕೆ ಹಾಕಿದ್ದಾರೆ. ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಕನ್ಹಯ್ಯ ಲಾಲ್‌ ಹತ್ಯೆಗೆ ಕಾಂಗ್ರೆಸ್‌ ಸರ್ಕಾರವೇ ಹೊಣೆ. ರಾಜ್ಯದಲ್ಲೂ ಕಾಂಗ್ರೆಸ್‌ ಸರ್ಕಾರ ಇದ್ದಾಗ ಪಿಎಫ್‌ಐ, ಎಸ್‌ಡಿಪಿಐ ಸದಸ್ಯರ ವಿರುದ್ಧದ 1,600 ಕ್ರಿಮಿನಲ್‌ ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆಯಲಾಗಿತ್ತು. ಇಂತಹ ತೀರ್ಮಾನಗಳೇ ಹಿಂಸೆಗೆ ಪ್ರಚೋದನೆ ನೀಡುತ್ತವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.