ADVERTISEMENT

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಲು ಒತ್ತಾಯ

ತಾರತಮ್ಯ ನಿವಾರಣೆಗೆ ಕ್ರಮ ಕೈಗೊಳ್ಳಲಿ: ಶಾಸಕ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2018, 16:36 IST
Last Updated 16 ನವೆಂಬರ್ 2018, 16:36 IST
ಅಭಯ ಪಾಟೀಲ
ಅಭಯ ಪಾಟೀಲ   

ಬೆಳಗಾವಿ: ಸರ್ಕಾರವು ಉತ್ತರ ಕರ್ನಾಟಕದ ಅಭಿವೃದ್ಧಿಯ ಹಿತದೃಷ್ಟಿಯಿಂದ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಇಲ್ಲಿನ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಒತ್ತಾಯಿಸಿದ್ದಾರೆ.

‘ಉತ್ತರ ಕರ್ನಾಟಕ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿಯಿಂದ ವಂಚಿತವಾಗಿದೆ. ತಾರತಮ್ಯ ನಿವಾರಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಿ, ಈ ಭಾಗದ ಜನರಿಗೆ ನ್ಯಾಯ ದೊರಕಿಸಿಕೊಡಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ಡಿಸೆಂಬರ್‌ನಲ್ಲಿ ಇಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಪ್ರತ್ಯೇಕ ಬಜೆಟ್ ಮಂಡಿಸಲು ದನಿ ಎತ್ತುವಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರಿಗೂ ಪತ್ರ ಬರೆದು ಮನವಿ ಮಾಡಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ಪಕ್ಷಾತೀತ ಹೋರಾಟ ನಡೆಯಬೇಕು. ಎಲ್ಲ ಶಾಸಕರು ಒಗ್ಗಟ್ಟಾಗಿ ದನಿ ಎತ್ತಿದರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಶಾಶ್ವತ ಪರಿಹಾರ ಸಿಗಲು ಸಾಧ್ಯ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕು ಎನ್ನುವುದು ಈ ಭಾಗದ ಜನರ ಆಶಯವಾಗಿದೆ. ಪ್ರತಿ ವರ್ಷ ಈ ಕುರಿತು ಚರ್ಚೆಯಾಗುತ್ತದೆ. ಆದರೆ, ಪರಿಹಾರ ಸಿಕ್ಕಿಲ್ಲ. ಈ ಬಾರಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎನ್ನುವ ಒಂದಂಶದ ಕಾರ್ಯಸೂಚಿಯನ್ನು ಅಧಿವೇಶನದಲ್ಲಿ ಚರ್ಚೆಗೆ ತರಲಾಗುವುದು’ ಎಂದು ‍ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.