
ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರ ಜಾಮೀನನ್ನು ಕೂಡಲೇ ರದ್ದುಗೊಳಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿರುವ ಯಾರನ್ನೂ ಕೂಡ ಭೇಟಿ ಮಾಡುವಂತಿಲ್ಲ ಎಂದು ಜಾಮೀನು ಷರತ್ತಿನಲ್ಲಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ತಿಳಿಸಿದೆ. ಆದರೆ, ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಅಬಕಾರಿ ಹಗರಣದಲ್ಲಿ ಆರೋಪಿಯಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ಕೇಜ್ರಿವಾಲ್ ಭೇಟಿ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಜಯ್ ಅವರನ್ನು ಭೇಟಿ ಮಾಡಿರುವುದು ಜಾಮೀನು ಷರತ್ತುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ದೆಹಲಿ ಮುಖ್ಯಮಂತ್ರಿಯಾಗಿ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿರುವ ಕೇಜ್ರಿವಾಲ್ ಅವರಿಗೆ ಕನಿಷ್ಠ ಕಾನೂನು ಜ್ಞಾನ ಅಥವಾ ವಿವೇಚನೆ ಇಲ್ಲದಿರುವುದು ಖೇದನೀಯ. ಅವರು ಮುಖ್ಯಮಂತ್ರಿಯಾಗಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಜಾಮೀನು ಷರತ್ತನ್ನು ಉಲ್ಲಂಘಿಸಿರುವ ಕೇಜ್ರಿವಾಲ್ ಅವರ ಜಾಮೀನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಯತ್ನಾಳ ಆಗ್ರಹಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮೇ 10ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ತಿಹಾರ್ ಜೈಲಿನಲ್ಲಿದ್ದ ಕೇಜ್ರಿವಾಲ್ ಶುಕ್ರವಾರ ಸಂಜೆ ಜೈಲಿನಿಂದ ಬಿಡುಗಡೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.