ADVERTISEMENT

ಬಿಜೆಪಿ ಶಾಸಕ ಬೆಲ್ಲದ ಕ್ಷಮೆಯಾಚನೆ: ಮುಕ್ತವಾಗಿ ಸ್ವಾಗತಿಸಿದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಸೆಪ್ಟೆಂಬರ್ 2024, 11:39 IST
Last Updated 3 ಸೆಪ್ಟೆಂಬರ್ 2024, 11:39 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ‘ನನ್ನ ವಿರುದ್ಧ ವೈಯಕ್ತಿಕ ಹೇಳಿಕೆ ನೀಡಿದ್ದ ಶಾಸಕ ಹಾಗೂ ಬಿಜೆಪಿ ಮುಖಂಡ ಅರವಿಂದ ಬೆಲ್ಲದ ಅವರು ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, ‘ಜಿಂದಾಲ್‌ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ನೀಡಿರುವುದು ವಿರೋಧಿಸಿ ಮಾತನಾಡುವಾಗ ಅರವಿಂದ ಬೆಲ್ಲದ ಅವರು ವೈಯಕ್ತಿಕವಾಗಿ ನನ್ನನ್ನು ನಿಂದಿಸಿದ್ದರು. ಅವರ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಅವರ ಮೇಲೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸುತ್ತೇನೆ' ಎಂದು ಹೇಳಿದ್ದಾರೆ.

‘ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನೂ ಮಾಡಿದ್ದೇನೆ’ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ADVERTISEMENT

‘ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ತೇಜೋವಧೆ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. ‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.