ADVERTISEMENT

ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ದಿನವಿಡೀ ದುಡಿಯುತ್ತೇನೆ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 7:45 IST
Last Updated 7 ಜೂನ್ 2022, 7:45 IST
ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಳಗಾವಿ: ‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140ರಿಂದ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ತರಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

‘ಮುಂದಿನ ಚುನಾವಣೆಯಲ್ಲಿ ಯಾರು ನಾಯಕತ್ವ ವಹಿಸುತ್ತಾರೆ ಎಂಬುದು ಮುಖ್ಯವಲ್ಲ. ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯುತ್ತದೆ’ ಎಂದು ಅವರು ನಗರದಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

‘ಈಗಾಗಲೇ ನಾವು ಸಿದ್ಧತೆ ನಡೆಸಿದ್ದೇವೆ. ಆದರೆ ಟಿಕೆಟ್ ಹಂಚಿಕೆ ವಿಚಾರವಾಗಿ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ. ಉತ್ತರ ಪ್ರದೇಶ ಮಾದರಿಯನ್ನು ಅನುಸರಿಸಿ ಟಿಕೆಟ್ ಕೊಡಬೇಕೆ ಎಂಬ ಬಗ್ಗೆಯೂ ನಿರ್ಧರಿಸಿಲ್ಲ. ಪ್ರಧಾನಿ ಮೋದಿ ಅವರು ನೀಡುವ ನಿರ್ದೇಶನದಂತೆ ಮುಂದುವರಿಯುತ್ತೇವೆ’ ಎಂದರು.

ADVERTISEMENT

‘ಪಕ್ಷಕ್ಕಾಗಿ ನಾನು ದಿನದ 24 ಗಂಟೆಯೂ ದುಡಿಯುತ್ತೇನೆ. ನನ್ನ ವಿಚಾರದಲ್ಲಿ ಕಾರ್ಯಕರ್ತರು ನೋವು ಪಡುವ ಅವಶ್ಯಕತೆ ಇಲ್ಲ’ ಎಂದೂ ಹೇಳಿದರು.

‘ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗೊಂದಲಕ್ಕೆ ಒಳಗಾಗಿದ್ದಾರೆ. ಹಿಗಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್ ಸೇರಿದಂತೆ ಕೆಲವು ವಿಚಾರಗಳನ್ನು ಅವರು ಹಗುರವಾಗಿ ತೆಗೆದುಕೊಂಡಿದ್ದಾರೆ. ದೊಡ್ಡ ಸ್ಥಾನದಲ್ಲಿರುವವರು ಜವಾಬ್ದಾರಿ ಅರಿತು ಹೇಳಿಕೆ ನೀಡಬೇಕು’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.