
ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ತಜ್ಞ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿತು.
ನ್ಯಾಯಾಲಯದ ಸೂಚನೆಯಂತೆ ಶನಿವಾರ ಸಂಸ್ಥೆಯ ನಿರ್ದೇಶಕ ಡಾ.ದಿನೇಶ್ ನೇತೃತ್ವದ ತಂಡ ಬಸವರಾಜ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿತು. ಇಸಿಜಿ, ಆಂಜಿಯೋಗ್ರಾಮ್ ಸೇರಿ ಹೃದಯಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಲಾಯಿತು. ರಕ್ತದ ಮಾದರಿಯನ್ನು ಪಡೆದುಕೊಳ್ಳಲಾಯಿತು.
‘ಬಸವರಾಜ ಅವರು ಹೃದಯ ಸಂಬಂಧಿ ಕಾಯಿಲೆಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ನಾಲ್ಕು ತಾಸಿಗೊಮ್ಮೆ ಅವರ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ವೈದ್ಯರು ನೀಡುತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಇದ್ದಾರೆ. ವೈದ್ಯರು ಇನ್ನೂ ವರದಿ ನೀಡಿಲ್ಲ. ವೈದ್ಯಕೀಯ ವರದಿಯೊಂದಿಗೆ ನ್ಯಾಯಾಧೀಶರ ಎದುರು ಬಸವರಾಜ ಅವರನ್ನು ಹಾಜರು ಪಡಿಸಲಾಗುವುದು’ ಎಂದು ಸಿಐಡಿ ಮೂಲಗಳು ತಿಳಿಸಿವೆ.
‘ವೈದ್ಯಕೀಯ ವರದಿ ಆಧರಿಸಿ ನ್ಯಾಯಾಲಯ ಬಸವರಾಜ ಅವರನ್ನು ಪೊಲೀಸ್ ವಶಕ್ಕೆ ನೀಡಲಿದೆಯೇ ಅಥವಾ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದೆಯೇ ಎಂಬುದು ಗೊತ್ತಾಗಲಿದೆ’ ಎಂದು ಮೂಲಗಳು ಹೇಳಿವೆ.
ಸಿಐಡಿ ಅಧಿಕಾರಿಗಳು ಗುರುವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬೈರತಿ ಬಸವರಾಜ ಅವರನ್ನು ವಶಕ್ಕೆ ಪಡೆದಿದ್ದರು. ಶುಕ್ರವಾರ ಮಧ್ಯಾಹ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಿ, ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು. ವೈದ್ಯಕೀಯ ವರದಿ ಸಲ್ಲಿಸಿದಾಗ ಬೈರತಿ ಬಸವರಾಜಗೆ ಹೃದಯ ಸಂಬಂಧಿ ಸಮಸ್ಯೆ ಇರುವ ಬಗ್ಗೆ ಉಲ್ಲೇಖಿಸಿರುವುದನ್ನು ಗಮನಿಸಲಾಗಿತ್ತು.
ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಕಾರಣ ಬಸವರಾಜ ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸುವಂತೆ ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರಿಗೆ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಜೆಸಿಜೆಎಂ) ಸೂಚಿಸಿತ್ತು.
2025ರ ಜುಲೈ 15ರಂದು ಬಿಕ್ಲು ಶಿವು ಅವರ ಕೊಲೆ ನಡೆದಿತ್ತು. ಆ ಕೊಲೆ ಪ್ರಕರಣದಲ್ಲಿ ಬೈರತಿ ಅವರು ಐದನೇ ಆರೋಪಿ ಆಗಿದ್ದಾರೆ. ಶಿವು ಅವರ ತಾಯಿ ನೀಡಿದ ದೂರಿನ ಮೇಲೆ ಸಿಐಡಿ ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.