ADVERTISEMENT

ಯತ್ನಾಳ್ ವಿರುದ್ಧ ಕ್ರಮಕ್ಕೆ ಬಿಜೆಪಿ ಶಾಸಕರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 20:46 IST
Last Updated 22 ಮಾರ್ಚ್ 2021, 20:46 IST
ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಿದರು.
ಮುಖ್ಯಮಂತ್ರಿ ಅವರನ್ನು ಭೇಟಿಯಾದ ಶಾಸಕರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಿದರು.   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ದೂರು ನೀಡಲು 30 ಕ್ಕೂ ಹೆಚ್ಚು ಶಾಸಕರು ನಿರ್ಧರಿಸಿದ್ದಾರೆ.

ಸೋಮವಾರ ರಾತ್ರಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಈ ಶಾಸಕರು ಯತ್ನಾಳ್‌ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸದೇ ಇದ್ದರೆ ವರಿಷ್ಠರಿಗೆ ದೂರು ನೀಡುತ್ತೇವೆ’ ಎಂದೂ ಹೇಳಿದ್ದಾರೆ.

ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಮುಖ್ಯಮಂತ್ರಿಯವರಿಗೆ ಮುಜುಗರ ತರುತ್ತಿದ್ದಾರೆ. ಇದು ವಿರೋಧಿಗಳಿಗೆ ಅಸ್ತ್ರವಾಗಿದೆ. ಇದರಿಂದ ವಿಧಾನಸಭೆಯಲ್ಲೂ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆಯೂ ಶಾಸಕರು ಮುಖ್ಯಮಂತ್ರಿಯವರಿಗೆ ದೂರು ನೀಡಿದರು. ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ಪಕ್ಷದ ಶಾಸಕರ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ. ವಿಶೇಷವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲಸಗಳು ಆಗುತ್ತಿಲ್ಲ ಎಂದು ದೂರಿದರು. ಈ ಬಗ್ಗೆ ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಬೆಳ್ಳಿಪ್ರಕಾಶ್‌, ಮಾಡಾಳ್ ವಿರೂಪಾಕ್ಷಪ್ಪ, ಪೂರ್ಣಿಮಾ ಶ್ರೀನಿವಾಸ್‌, ಆರಗ ಜ್ಞಾನೇಂದ್ರ, ಹರತಾಳ ಹಾಲಪ್ಪ, ಎಂ.ಪಿ.ಕುಮಾರಸ್ವಾಮಿ, ಲಾಲಾಜಿ ಮೆಂಡನ್ ಮುಂತಾದವರು ಇದ್ದರೆಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.