ADVERTISEMENT

ಟಿಪ್ಪು ಜಯಂತಿಯಿಂದ ಬಿಜೆಪಿ ಶಾಸಕರು ದೂರ: ಸರ್ಕಾರಕ್ಕೆ ಯಡಿಯೂರಪ್ಪ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2018, 6:33 IST
Last Updated 9 ನವೆಂಬರ್ 2018, 6:33 IST
   

ಬೆಂಗಳೂರು: ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿಯ ಯಾವುದೇ ಶಾಸಕರು ಭಾಗವಹಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಆಹ್ವಾನ ನೀಡಿದಾಗ, ತಾವಾಗಲಿ, ಪಕ್ಷದ ಯಾವುದೇ ಶಾಸಕರು ಭಾಗವಹಿಸುವುದಿಲ್ಲ. ಆಹ್ವಾನ ಪತ್ರಿಕೆಯಲ್ಲೂ ಹೆಸರು ಹಾಕದಂತೆ ಸೂಚಿಸಿದರು ಎಂದು ಮೂಲಗಳು ಹೇಳಿವೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಪತ್ರ ಬರೆದು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಂಸ್ಕೃತಿ ಇಲಾಖೆಗೆ ತಿಳಿಸಿದ್ದಾರೆ. ಬೆಂಗಳೂರು ಸಂಸದರಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಪಿ.ಸಿ.ಮೋಹನ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸ್ಪೀಕರ್ ರಮೇಶ್ ಕುಮಾರ್ ಅವರೂ ಜಯಂತಿಯಲ್ಲಿ ಭಾಗವಹಿಸುತ್ತಿಲ್ಲ. ಸ್ಪೀಕರ್ ಆದ ಬಳಿಕ ತಾವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಬ್ಯಾಂಕ್ವೆಟ್ ಹಾಲ್‌ನಲ್ಲಿಕಾರ್ಯಕ್ರಮ:ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್‌ ನಲ್ಲಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಅವರ ಒತ್ತಡದ ಮೇರೆಗೆ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.