ADVERTISEMENT

ಪರೇಶ್ ಮೇಸ್ತ ಪ್ರಕರಣ| ಸುಳ್ಳು ಆರೋಪಕ್ಕೆ ಬಿಜೆಪಿ ಕ್ಷಮೆ ಕೇಳಬೇಕು: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2022, 2:59 IST
Last Updated 4 ಅಕ್ಟೋಬರ್ 2022, 2:59 IST
   

ಬೆಂಗಳೂರು: ಪರೇಶ್‌ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, 'ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು' ಎಂದಿದ್ದಾರೆ.

'ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.