ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆ ಇದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಮೇಕೆದಾಟು ಯೋಜನೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ’ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆಯಾಗಿದೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ಬದ್ಧತೆಯೂ ಹೌದು. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿನಾಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆಯಿದೆಯೇ? ಎಂದು ಕಿಡಿಕಾರಿದೆ.
'ಮೇಕೆದಾಟು ಯೋಜನೆ ಜಾರಿಗಾಗಿ ಆಯೋಜಿಸಿರುವ ಪಾದಯಾತ್ರೆಯನ್ನು ಡಿ.ಕೆ.ಶಿವಕುಮಾರ್ ಅವರು ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿಕೊಂಡಿದ್ದಾರೆ. ಈ ಹೋರಾಟದಲ್ಲಿ ಭಾಗಿಯಾಗುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಮಾಣಪತ್ರ ನೀಡಲಿದ್ದಾರಂತೆ. ಇತಿಹಾಸ ಹಾಗೂ ಅಧ್ಯಯನದ ಕೊರತೆ ಮನುಷ್ಯನನ್ನು ಯಾವ ಹಂತಕ್ಕೂ ಕರೆದೊಯ್ಯಬಹುದೆಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ?‘ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಮೇಕೆದಾಟು ಸಮಾನಾಂತರ ಅಣೆಕಟ್ಟೆ ನಿರ್ಮಾಣ ಯೋಜನೆ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.