ADVERTISEMENT

ಗ್ಯಾರಂಟಿಗಾಗಿ ಪರಿಶಿಷ್ಟರ ಹಣ ಬಳಕೆ: ಬೊಮ್ಮಾಯಿ ಆರೋಪ

​ಪ್ರಜಾವಾಣಿ ವಾರ್ತೆ
Published 21 ಜುಲೈ 2023, 16:44 IST
Last Updated 21 ಜುಲೈ 2023, 16:44 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಹಣವನ್ನು ಹೊಂದಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾದ ಎಸ್‌ಸಿಪಿ– ಟಿಎಸ್‌ಪಿ ಅನುದಾನವನ್ನು ಬಳಸಿಕೊಳ್ಳುವ ಮೂಲಕ ಆ ಸಮುದಾಯಗಳಿಗೆ ದ್ರೋಹ ಮಾಡಿದೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಪಕ್ಷದ ಶಾಸಕರನ್ನು ವಿಧಾನಸಭೆ ಕಲಾಪದಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಶುಕ್ರವಾರವೂ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರವಾಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಬರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. ಹಿಂದೆ ಇವರ ಅವಧಿಯಲ್ಲೇ ನಾಲ್ಕು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ. ಈಗಲೂ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಇದು ಕಳವಳದ ಸಂಗತಿ ಎಂದರು.

ADVERTISEMENT

‘ವಿದ್ಯಾರ್ಥಿಗಳು, ರೈತರು, ಸರ್ಕಾರಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಸಾಮಾನ್ಯ ಜನರ ಬದುಕು ಅಸ್ಥಿರಗೊಳಿಸಿದ್ದಾರೆ. ಜನ ವಿರೋಧಿ ಬಜೆಟ್‌ ಮಂಡಿಸಿರುವ ಇವರು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಸಿದ್ದರಾಮಯ್ಯ ಅತಿ ಹೆಚ್ಚು ಸಾಲ ಮಾಡಿದ್ದಾರೆ. ನಿಜಲಿಂಗಪ್ಪ ಅವರಿಂದ ಹಿಡಿದು ಜಗದೀಶ ಶೆಟ್ಟರ್‌ ವರೆಗೆ ₹1 ಲಕ್ಷ ಕೋಟಿ ಸಾಲವಾಗಿತ್ತು. ಸಿದ್ದರಾಮಯ್ಯ ಅವಧಿಯಲ್ಲಿ ₹1.30 ಲಕ್ಷ ಕೋಟಿ ಸಾಲ ಮಾಡಿದರು. ನಮ್ಮ ಅವಧಿಯಲ್ಲಿ ಕೋವಿಡ್‌, ಪ್ರವಾಹ ಮತ್ತು ಲಾಕ್‌ಡೌನ್ ಕಾರಣ ಆದಾಯ ಇಲ್ಲದೇ ಸಾಲ ಮಾಡಬೇಕಾಗಿ ಬಂದಿತ್ತು. ನಾವು ಅಧಿಕಾರ ಬಿಟ್ಟಾಗ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು. ಆದರೆ ಇವರು ಗ್ಯಾರಂಟಿಗಾಗಿ ಹೆಚ್ಚಿನ ಸಾಲ ಮಾಡಿದ್ದಾರೆ’ ಎಂದು ಟೀಕಿಸಿದರು.

ಶನಿವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿ ಮತ್ತು ವೈಫಲ್ಯಗಳನ್ನು ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.