ಬಿಜೆಪಿ ಧ್ವಜ ( ಸಾಂಕೇತಿಕ ಚಿತ್ರ)
ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಮತ್ತು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಗುರುವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ಕುಮಾರ್ ತಿಳಿಸಿದರು.
ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
‘ಸಚಿವ ಕೃಷ್ಣ ಬೈರೇಗೌಡ ರಾಜ್ಯಪಾಲರನ್ನು ‘ನಾಲಾಯಕ್’ ಎಂದು ಕರೆದಿದ್ದಾರೆ. ಗೆಹಲೋತ್ ಅವರನ್ನು ರಾಜಭವನದಿಂದ ಓಡಿಸುವುದಾಗಿ ಐವನ್ ಡಿಸೋಜ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಪ್ರಧಾನಮಂತ್ರಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಸಚಿವ ಜಮೀರ್ ಹಿಂಸೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಇವರೆಲ್ಲರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಬೇಕು ಎಂಬುದು ಪ್ರತಿಭಟನೆಯ ಆಗ್ರಹ’ ಎಂದರು.
ಪಕ್ಷದ ನಾಯಕರಾದ ಡಿ.ವಿ.ಸದಾನಂದಗೌಡ ತುಮಕೂರಿನಲ್ಲಿ, ಬಸವರಾಜ ಬೊಮ್ಮಾಯಿ ದಾವಣಗೆರೆ, ಗೋವಿಂದ ಕಾರಜೋಳ ಚಿತ್ರದುರ್ಗ, ಆರ್.ಅಶೋಕ ಮಂಡ್ಯ, ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮತ್ತು ಛಲವಾದಿ ನಾರಾಯಣಸ್ವಾಮಿ ಬೆಂಗಳೂರು, ಬಿ.ಶ್ರೀರಾಮುಲು ಬಳ್ಳಾರಿ, ಸಿ.ಟಿ.ರವಿ ಚಿಕ್ಕಮಗಳೂರು, ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.