ADVERTISEMENT

ಸಂಸದ ಡಿ.ಕೆ.ಸುರೇಶ್‌ ಮನೆಗೆ ಮುತ್ತಿಗೆ ಯತ್ನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 2:18 IST
Last Updated 5 ಜನವರಿ 2022, 2:18 IST
ಡಿ.ಕೆ.ಸುರೇಶ್‌ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ತಡೆದರು–ಪ್ರಜಾವಾಣಿ ಚಿತ್ರ  
ಡಿ.ಕೆ.ಸುರೇಶ್‌ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ತಡೆದರು–ಪ್ರಜಾವಾಣಿ ಚಿತ್ರ     

ಬೆಂಗಳೂರು:ಸಂಸದ ಡಿ.ಕೆ.ಸುರೇಶ್‌ ಅವರು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಡಿ.ಕೆ.ಸುರೇಶ್‌ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

‘ರಾಮನಗರದಲ್ಲಿ ನಡೆದಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಅವರ ಎದುರಲ್ಲೇ ಸುರೇಶ್‌ ಅವರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದು ಅವರ ಗೂಂಡಾ ಪ್ರವೃತ್ತಿಯನ್ನು ಬಿಂಬಿಸುತ್ತದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ಅವರು ವೇದಿಕೆಯ ಮೇಲಿದ್ದ ಮೈಕ್‌ ಕಿತ್ತೆಸೆದಿರುವುದು ಕೂಡ ಖಂಡನಾರ್ಹ. ಆ ಮೂಲಕ ಅವರು ಸುರೇಶ್‌ ಅವರ ಗೂಂಡಾ ವರ್ತನೆಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಇಬ್ಬರ ಮೇಲೂ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಕಾಂಗ್ರೆಸ್‌ ನಾಯಕರ ಗೂಂಡಾ ವರ್ತನೆಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ರಾಮನಗರ ಚಲೋ ಹಮ್ಮಿಕೊಳ್ಳಲಿದ್ದೇವೆ’ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಗೌಡ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಬ್ಯಾರಿಕೇಡ್‌ಗಳನ್ನು ತಳ್ಳಿ ಮನೆಗೆ ಮುತ್ತಿಗೆ ಹಾಕಲು ಮುಂದಾದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಯುವ ಮೋರ್ಚಾ ಸಂಘಟನಾ ಕಾರ್ಯದರ್ಶಿ ದಶರಥ್, ರಾಜ್ಯ ಕೋಶಾಧ್ಯಕ್ಷ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಎಸ್.ವಿ.ವಿನೋದ್‍ಕುಮಾರ್, ಅಭಿಲಾಷ್ ರೆಡ್ಡಿ (ಬೆಂಗಳೂರು ಕೇಂದ್ರ ಜಿಲ್ಲೆ) ಮತ್ತು ಪುನೀತ್ ರೆಡ್ಡಿ (ಬೆಂಗಳೂರು ದಕ್ಷಿಣ ಜಿಲ್ಲೆ) ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.