
ದಾವಣಗೆರೆ: ಮೆಕ್ಕೆಜೋಳ ಮತ್ತು ಭತ್ತಕ್ಕೆ ನ್ಯಾಯಯುತ ಬೆಲೆಯನ್ನು ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನ. 25ರಿಂದ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
‘ನ.25ರಂದು ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಚಕ್ಕಡಿ ಗಾಡಿಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಬಹಿರಂಗ ಸಭೆ ನಡೆಸಲಾಗುವುದು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ನ.27 ಮತ್ತು 28ರಂದು ರಾಜ್ಯದ ಬಿಜೆಪಿ ಮಂಡಲ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಡಿ.1 ಮತ್ತು 2ರಂದು ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದರು.
‘ಮೆಕ್ಕೆಜೋಳದ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಹಿತಿ ನೀಡಿದ್ದಾರೆ. ರಾಜ್ಯದ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ’ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ಮಾಜಿ ಶಾಸಕ ಎಂ. ಬಸವರಾಜ ನಾಯ್ಕ, ಮುಖಂಡರಾದ ಬಿ.ಎಂ. ಸತೀಶ್, ಚಂದ್ರಶೇಖರ ಪೂಜಾರ್, ಬಿ.ಜಿ. ಅಜಯ ಕುಮಾರ್, ಧನಂಜಯ ಕಡ್ಲೆಬಾಳ್, ಐರಣಿ ಅಣ್ಣೇಶ್, ಆರ್.ಎಲ್. ಶಿವಪ್ರಕಾಶ್, ತಾರೇಶ್ ನಾಯ್ಕ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.