ADVERTISEMENT

ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಕಾಲ್ತುಳಿತ ಪ್ರಕರಣ: ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 20:09 IST
Last Updated 8 ಜೂನ್ 2025, 20:09 IST
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.   

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿಯ ಸಾವಿಗೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಹತ್ಯೆಯಾಗಿದೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

‘ಜೂನ್‌ 4 ರಂದು ವಿಧಾನಸೌಧದ ಡಿಸಿಪಿಯವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ, ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್‌ಗೆ ತೊಂದರೆ ಆಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೆ, ಮುಖ್ಯಕಾರ್ಯದರ್ಶಿ ಅವರಿಂದ ಹಿಡಿದು ಎಲ್ಲರೂ ಇದನ್ನು ನಿರ್ಲಕ್ಷಿಸಿದ್ದಾರೆ’ ಎಂದು ಅಶೋಕ ಕಿಡಿಕಾರಿದರು.

ADVERTISEMENT

‘ಇಲಾಖೆ ಸಿಬ್ಬಂದಿ ಮತ್ತು ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ, ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ ಡ್ರೋನ್‌ಗೆ ಅವಕಾಶ ಇಲ್ಲ ಎಂದೂ ಹೇಳಲಾಗಿದೆ. ಎಲ್ಲಾ ಸೂಚನೆಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ’ ಎಂದರು.

‘ವೇದಿಕೆಯಲ್ಲಿ 20 ರಿಂದ 30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಉಲ್ಲಂಘಿಸಲಾಗಿದೆ. 11 ಆಟಗಾರರು ಸೇರಿ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿದ್ದರಾಮಯ್ಯ ಅವರು ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ’ ಎಂದು ಅಶೋಕ ದೂರಿದರು.

‘ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಸಂಚಾರ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ’ ಎಂದು ಹೇಳಿದರು.

‘ಕಪ್‌ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್‌ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ’ ಎಂದು ಅಶೋಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.