ADVERTISEMENT

ಪಠ್ಯ: ಆಕ್ರೋಶ ಶಮನಕ್ಕೆ ಸಂವಾದದ ಮೊರೆ, ರಾಜ್ಯದ ವಿವಿಧೆಡೆ ಚರ್ಚಾಗೋಷ್ಠಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 16:40 IST
Last Updated 11 ಜೂನ್ 2022, 16:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಷಯದಲ್ಲಿ ಜನಾಕ್ರೋಶ ತಗ್ಗಿಸಲು ರಾಜ್ಯ ಸರ್ಕಾರ ಸಂವಾದದ ಮೊರೆ ಹೋಗಿದೆ. ಸಂಘ ಪರಿವಾರದ ಭಾಗವಾಗಿರುವ ಸಂಘಟನೆಗಳು ಮತ್ತು ಸಂಘ–ಸಂಸ್ಥೆಗಳ ನೇತೃತ್ವದಲ್ಲಿ ‘ಪಠ್ಯ ಪುಸ್ತಕ ಪರಿಷ್ಕರಣ ಸತ್ಯ–ಮಿಥ್ಯ’ ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯವ್ಯಾಪಿ ಸಂವಾದ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ.

ಸಚಿವರು, ಶಾಸಕರು, ಬಿಜೆಪಿಯ ಪ್ರಮುಖ ನಾಯಕರು, ವಿಶ್ರಾಂತ ಕುಲಪತಿಗಳು, ಪ್ರಾಧ್ಯಾಪಕರು ಸೇರಿದಂತೆ ಶಿಕ್ಷಣ ಕ್ಷೇತ್ರದ ಪ್ರಮುಖರ ಮೂಲಕ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಚರ್ಚೆ ಆಯೋಜಿಸುವಂತೆ ಸಂಘ ಪರಿವಾರದ ಪ್ರಮುಖರು ನೀಡಿರುವ ನಿರ್ದೇಶನದಂತೆ ಶನಿವಾರವೇ ರಾಜ್ಯದ ಹಲವು ಕಡೆಗಳಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಈ ಸಂವಾದ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದಲ್ಲಿ ನಡೆದ ಸಂವಾದದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್‌.ಎ. ಬಾರಿ ಪಾಲ್ಗೊಂಡಿದ್ದರು. ದಾವಣಗೆರೆಯಲ್ಲಿ ನಡೆದ ಚರ್ಚಾಗೋಷ್ಠಿಯ ನೇತೃತ್ವವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಹಿಸಿದ್ದರು. ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಕುಮಾರ್‌ ಬಂಗಾರಪ್ಪ ಪಾಲ್ಗೊಂಡಿದ್ದರು.

ADVERTISEMENT

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದ ಚರ್ಚೆಯನ್ನು ತಾಲ್ಲೂಕು, ಹೋಬಳಿ ಮಟ್ಟಕ್ಕೆ ವಿಸ್ತರಿಸಿ ಹೋರಾಟ ಕೈಗೆತ್ತಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ಅದಕ್ಕೆ ಪ್ರತಿಯಾಗಿ ರಾಜ್ಯದ ವಿವಿಧೆಡೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಸಚಿವರು, ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್‌ ಚಕ್ರತೀರ್ಥ, ಬಿಜೆಪಿ ಹಾಗೂ ಸಂಘ ಪರಿವಾರದ ಕೆಲವು ಮುಖಂಡರು ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರು, ಶಾಸಕರು ಮತ್ತು ಪಕ್ಷದ ಮುಖಂಡರು ಇತರ ಯಾವುದೇ ಕಾರ್ಯಕ್ರಮಗಳಿದ್ದರೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಎಂಬ ಸಂದೇಶವನ್ನು ರವಾನಿಸಲಾಗಿದೆ. ಎಲ್ಲ ಹಂತದ ನಾಯಕರು ಮತ್ತು ಮುಖಂಡರು ಪಠ್ಯಪುಸ್ತಕ ಪರಿಷ್ಕರಣೆಯನ್ನು ಸಮರ್ಥಿಸಿಕೊಳ್ಳಲು ಸಿದ್ಧರಾಗುವಂತೆ ಸೂಚಿಸಲಾಗಿದೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.