ADVERTISEMENT

ಮತಗಳ್ಳತನದ ಆರೋಪ |ಆ.5ರಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 15:36 IST
Last Updated 2 ಆಗಸ್ಟ್ 2025, 15:36 IST
<div class="paragraphs"><p>ಬಿ.ವೈ.ವಿಜಯೇಂದ್ರ</p></div>

ಬಿ.ವೈ.ವಿಜಯೇಂದ್ರ

   

ಬೆಂಗಳೂರು: ‘ಮತ ಕಳ್ಳತನದ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಮಸಿ ಬಳಿಯಲು ಯತ್ನಿಸುತ್ತಿರುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ವಿರುದ್ಧ ಹೋರಾಟ ನಡೆಸುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದ ಜನರ ವಿಶ್ವಾಸವನ್ನು ಗಳಿಸುವಲ್ಲಿ ರಾಹುಲ್‌ ವಿಫಲರಾಗಿದ್ದಾರೆ. ಸೋಲಿನ ಅವಮಾನದಿಂದ ಬಳಲಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆ ಬಳಿ ಆಗಸ್ಟ್‌ 5ರಂದು ಪ್ರತಿಭಟನೆ ನಡೆಸುತ್ತೇವೆ’ ಎಂದರು.

ADVERTISEMENT

‘ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದರು. ರಾಹುಲ್ ಅವರು ಚುನಾವಣಾ ಆಯೋಗದ ಮೇಲೆ ಆರೋಪ ಹೊರಿಸುವ ಮೂಲಕ ದೇಶದ ಜನರಿಗೆ, ಆಯೋಗಕ್ಕೆ ಅವಮಾನ ಮಾಡುತ್ತಿದ್ದಾರೆ. ಈ ಆರೋಪದ ಹಿಂದೆ ಇರುವ ಕಾಂಗ್ರೆಸ್‌ ಸಂಚನ್ನು ಜನರಿಗೆ ತಿಳಿಸುತ್ತೇವೆ’ ಎಂದು ಹೇಳಿದರು.

‘ಮತಗಳ್ಳತನ ಆಗಿದೆ ಎಂಬುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂದು ರಾಹುಲ್‌ ಗಾಂಧಿ ಆದಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದಾರೆ. ಅವರ ಬಳಿ ಪುರಾವೆ ಇದ್ದದ್ದೇ ಆದರೆ, ನ್ಯಾಯಾಲಯಕ್ಕೆ ಹೋಗಲಿ. ಅದರ ಬದಲಿಗೆ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಏಕೆ ಮಾಡಬೇಕು?’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಿರುವುದು ಮತ್ತು ದೇಶ ಅಭಿವೃದ್ಧಿ ಹಾದಿಯಲ್ಲಿರುವುದನ್ನು ಸಹಿಸಿಕೊಳ್ಳಲು ರಾಹುಲ್‌ ಗಾಂಧಿ ಅವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಮೋದಿ, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಿದ್ದಾರೆ’ ಎಂದರು.

ಮಹದೇವಪುರ ರಾಜಾಜಿನಗರ ವ್ಯಾಪ್ತಿಯಲ್ಲಿ ಅಕ್ರಮ ನಡೆದಿದೆ ಎನ್ನುತ್ತಿದ್ದಾರೆ. ಚುನಾವಣೆಯಲ್ಲಿ ನಿಮ್ಮದೇ ಅಧಿಕಾರಿಗಳು ಇದ್ದರಲ್ಲವೇ? ಅವರು ನಿಮ್ಮ ಮಾತು ಕೇಳಲಿಲ್ಲವೇ?
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.