ADVERTISEMENT

ಬೋರ್ಡ್‌ ಪರೀಕ್ಷೆ: ಎಜಿ ಅಭಿಪ್ರಾಯ ಪಡೆದು ಮುಂದಿನ ಕ್ರಮ– ರಿತೇಶ್‌ಕುಮಾರ್ ಸಿಂಗ್

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 16:15 IST
Last Updated 8 ಏಪ್ರಿಲ್ 2024, 16:15 IST
   

ಬೆಂಗಳೂರು: ‘ರಾಜ್ಯ ಪಠ್ಯಕ್ರಮದ ಶಾಲೆಗಳ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ಮುಂದುವರಿಯುತ್ತೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್ ತಿಳಿಸಿದರು.

ಸುಪ್ರೀಂ ಕೋರ್ಟ್‌ ಸೋಮವಾರ ನೀಡಿದ ತೀರ್ಪು ಕುರಿತಂತೆ ಪ್ರತಿಕ್ರಿಯಿಸಿದ ಅವರು, ‘ಈಗಾಗಲೇ ಪರೀಕ್ಷೆ ಮುಗಿದು, ಸೋಮವಾರ ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಮಂಗಳವಾರದಿಂದ ಬೇಸಿಗೆ ರಜೆ ನೀಡಲಾಗಿದೆ’ ಎಂದರು.

‘ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಕಾರಣಕ್ಕೆ ಮತ್ತೆ ಶಾಲೆಗಳನ್ನು ತೆರೆಯಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇವಿಯಟ್ ಸಲ್ಲಿಸಿಲ್ಲ. ಆದ್ದರಿಂದ, ನಾವು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಅವರಿಂದ ಸಲಹೆ ಪಡೆಯುತ್ತೇವೆ’ ಎಂದೂ ತಿಳಿಸಿದರು.

ADVERTISEMENT

ಗೊಂದಲ ನಿವಾರಿಸಿ: ‘ರಾಜ್ಯ ಹೈಕೋರ್ಟ್‌ನ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಆರ್‌ಟಿಇ ಕಾಯ್ದೆ ಉಲ್ಲಂಘಿಸಿ ನಡೆಸಿದ ಪರೀಕ್ಷೆ ಅಸಿಂಧುವಾಗಿದೆ. ಹೀಗಾಗಿ, 5,8 ಮತ್ತು 9ನೇ ತರಗತಿ ಫಲಿತಾಂಶ ಪ್ರಕಟಿಸುವಂತೆ ಇಲ್ಲ. ಒಂದು ವೇಳೆ ಪ್ರಕಟಿಸಿದ್ದರೆ ಮಾನ್ಯತೆ ನೀಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಉಂಟಾಗಿರುವ ಗೊಂದಲ ನಿವಾರಿಸಲು ಇಲಾಖೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಅಷ್ಟೆ ಅಲ್ಲ, ಇನ್ನಾದರೂ ಇಲಾಖೆಯ ಅಧಿಕಾರಿಗಳು ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳನ್ನು ಪಾಲಿಸಬೇಕು’ ಎಂದು ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.