ADVERTISEMENT

ವರಿಷ್ಠರ ಭೇಟಿಗೆ ಬೊಮ್ಮಾಯಿ ಯತ್ನ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:53 IST
Last Updated 2 ಜುಲೈ 2025, 15:53 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೆಲವೇ ದಿನಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಸುದ್ದಿ ಹಬ್ಬಿರುವ ಹೊತ್ತಿನಲ್ಲಿ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ವರಿಷ್ಠರ ಭೇಟಿಗೆ ಪ್ರಯತ್ನ ನಡೆಸಿದ್ದಾರೆ. 

ಖಾಸಗಿ ಕೆಲಸದ ನಿಮಿತ್ತ ರಾಷ್ಟ್ರ ರಾಜಧಾನಿಗೆ ಬಂದಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿಗೆ ಬುಧವಾರ ಕಾಲಾವಕಾಶ ಕೋರಿದರು. ನಡ್ಡಾ ಅವರು ಹಿಮಾಚಲ ಪ್ರದೇಶ ಹಾಗೂ ಸಿಂಗ್‌ ಅವರು ಬಿಹಾರ ಪ್ರವಾಸದಲ್ಲಿದ್ದಾರೆ. ಹೀಗಾಗಿ, ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. 

ರಾಜ್ಯ ಘಟಕದ ಅಧ್ಯಕ್ಷರಾಗಿ ಮುಂದುವರಿಯಲು ಬಿ.ವೈ. ವಿಜಯೇಂದ್ರ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಶಾಸಕ ವಿ.ಸುನೀಲ್‌ ಕುಮಾರ್ ಅವರನ್ನು ಈ ಸ್ಥಾನಕ್ಕೆ ನೇಮಿಸಬೇಕು ಎಂದು ತಟಸ್ಥರ ಬಣ ಲಾಬಿ ನಡೆಸಿದೆ. ಇನ್ನೊಂದೆಡೆ, ಮೂರು ಬಣಗಳ ಕಿತ್ತಾಟ ತೀವ್ರವಾಗಿರುವುದರಿಂದ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ವರಿಷ್ಠರು ಮಣೆ ಹಾಕಬಹುದು ಎಂಬ ಚರ್ಚೆ ಶುರುವಾಗಿದೆ. ಇದನ್ನು ಜೋಶಿ ಆಪ್ತರು ತಳ್ಳಿ ಹಾಕಿದ್ದಾರೆ. 

ADVERTISEMENT

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಬಿ.ಎಸ್‌.ಯಡಿಯೂರಪ್ಪ ಮುನಿಸಿಗೆ ಕಾರಣವಾಗುವಂತಹ ಕಠಿಣ ತೀರ್ಮಾನವನ್ನು ಪಕ್ಷದ ವರಿಷ್ಠರು ತೆಗೆದುಕೊಳ್ಳುವ ಸಂಭವ ಕಡಿಮೆ. ಹೀಗಾಗಿ, ಅಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ಮುಂದುವರಿಯುವ ಸಾಧ್ಯತೆ ಹೆಚ್ಚು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದರು. 

ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ಈ ವಾರಾಂತ್ಯದಲ್ಲಿ ಚುನಾವಣೆ ನಡೆಯಲಿದೆ ಎಂಬ ಸುದ್ದಿ ಹಬ್ಬಿತ್ತು. ರಾಜ್ಯದ ಚುನಾವಣಾ ಉಸ್ತುವಾರಿ ಆಗಿರುವ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರು ಇದೇ 3 ಹಾಗೂ 4ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿರಲಿದ್ದಾರೆ. ಜತೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ವಾಪಸಾಗುವುದು ಇದೇ 9ರಂದು. ಆ ಬಳಿಕವೇ ಚುನಾವಣಾ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.