ನವದೆಹಲಿ: ‘ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿ ಹೊರ ಹೊಮ್ಮಿರುವ ಬೆಂಗಳೂರಿನಲ್ಲಿ ವಿಜ್ಞಾನ ನಗರ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ. ಕಿಶನ್ ರೆಡ್ಡಿ ಅವರಿಗೆ ಮನವಿ ಮಾಡಿದರು.
ಕೇಂದ್ರ ಸಚಿವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದ ಅವರು, ‘ಕರ್ನಾಟಕದ ಜನ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಅದಕ್ಕೆ ಹೊಂದಿಕೊಂಡಿರುವ ರಾಮನಗರದಲ್ಲಿದ್ದು, ಈ ಪ್ರದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಪ್ರಯೋಜನದ ದೃಷ್ಟಿಯಿಂದ ಬೆಂಗಳೂರಿಗೆ ವಿಜ್ಞಾನ ನಗರ ಮಂಜೂರು ಮಾಡಬೇಕು’ ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿಜ್ಞಾನ ಕೇಂದ್ರ, ಪ್ಲಾನೇಟೋರಿಯಮ್, ರಾಯಚೂರು ಜಿಲ್ಲೆಯಲ್ಲಿ ₹22.25 ಕೋಟಿ ವೆಚ್ಚದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ, ಯಾದಗಿರಿ ಜಿಲ್ಲೆಯಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳನ್ನು ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆಯನ್ನ ಕೇಂದ್ರ ಸಚಿವರು ನೀಡಿದ್ದಾರೆ ಎಂದರು.
ರಾಯಚೂರಿಗೆ ಏಮ್ಸ್ ಮಂಜೂರಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಭಗವಂತ ಖೂಬಾ ಅವರಿಗೆ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.