ಬಿ.ಪಿ. ಹರೀಶ್
ಬೆಂಗಳೂರು: ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ದಾವಣಗೆರೆ ಸೆಷನ್ಸ್ ನ್ಯಾಯಾಲಯ ಸಮನ್ಸ್ ಹೊರಡಿಸಿದ್ದನ್ನು ಹೈಕೋರ್ಟ್ ರದ್ದುಪಡಿಸಿದೆ.
‘ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಬಿ.ಪಿ.ಹರೀಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಸಮನ್ಸ್ ಜಾರಿಗೊಳಿಸುವಂತೆ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
‘ನ್ಯಾಯಾಲಯ ತನ್ನ ವಿವೇಚನೆ ಬಳಸಿ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಬಗ್ಗೆ ಹೊಸದಾಗಿ ಕ್ರಮ ಕೈಗೊಳ್ಳಬೇಕು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ, ಅರ್ಜಿ ವಿಲೇವಾರಿ ಮಾಡಿದೆ. ಹರೀಶ್ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಪಿ. ದಳವಾಯಿ ವಾದ ಮಂಡಿಸಿದರು.
ಪ್ರಕರಣವೇನು?: ‘ 2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಹರೀಶ್ ಅವರನ್ನು ದಲಿತ ಸಮುದಾಯದ ಕೆಲ ಮುಖಂಡರು ಅವರನ್ನು ಅಭಿನಂದಿಸಿದ್ದರು. ಈ ವೇಳೆ ಹರೀಶ್ ಅವರು ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರೂ ದಲಿತರು ನನಗೆ ಮತ ಹಾಕಿಲ್ಲ ಎಂದು ಆಕ್ಷೇಪಿಸಿದ್ದರು’ ಎಂದು ಆರೋಪಿಸಿ ಬಿ.ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಹರೀಶ್ ವಿರುದ್ಧ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಸೆಷನ್ಸ್ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಆರೋಪಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.