ಕರ್ನಾಟಕ ಹೈಕೋರ್ಟ್ ಹಾಗೂ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಫಿರ್ಯಾದುದಾರ ಮಹಿಳೆ (ಈಗ ಬದುಕಿಲ್ಲ) ಡಿಜಿಪಿ ಪೊಲೀಸ್ ಕಮಿಷನರ್ ಪತಿ ಮಗ ಸಂಬಂಧಿಗಳ ಮೇಲೂ ದೂರು ನೀಡಿದ್ದಾರೆ’ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಪುನುರುಚ್ಚರಿಸಿದರು.
ಪ್ರಕರಣ ರದ್ದುಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಯಡಿಯೂರಪ್ಪ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ ‘ಫಿರ್ಯಾದು ನೀಡಿದ್ದ ಮಹಿಳೆಗೆ ಇಂತಹದೊಂದು ಹವ್ಯಾಸ ಇತ್ತು. ಹಲವರ ಮೇಲೆ ದೂರು ದಾಖಲಿಸಿದ್ದರು. ಈಗಾಗಲೇ ಇಂತಹ ಘಟನೆ ನಡೆದಿಲ್ಲವೆಂದು ಹೇಳಿದ ಸಾಕ್ಷಿಗಳೂ ಇದ್ದಾರೆ’ ಎಂದು ಪ್ರತಿಪಾದಿಸಿದರು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿತು.
ಅರ್ಜಿ ಏನು?: ‘ನನ್ನ ವಿರುದ್ಧ ವಿವಿಧ ಕಾಯ್ದೆಗಳಡಿ 2025ರ ಫೆಬ್ರುವರಿ 28ರಂದು ಪೋಕ್ಸೊ ವಿಶೇಷ ನ್ಯಾಯಾಲಯ ಹೊರಡಿಸಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಆರ್‌ಎಂವಿ ಎರಡನೇ ಹಂತದಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ‘ಧವಳಗಿರಿ’ ನಿವಾಸದಲ್ಲಿ 2024ರ ಫೆಬ್ರುವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ‘ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂಬುದು ಆರೋಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.