ADVERTISEMENT

ಬೇಡಿಕೆ ಆಧರಿಸಿ ಕೌಶಲ ಅಭಿವೃದ್ಧಿ ತರಬೇತಿ: ಮುಖ್ಯಮಂತ್ರಿ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 7:58 IST
Last Updated 29 ಜೂನ್ 2020, 7:58 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಕರ್ನಾಟಕ ಕೌಶಲಾಭಿವೃದ್ಧಿ ನಿಗಮ ನಿಯಮಿತ ಆಯೋಜಿಸಿದ್ದ ಸ್ಕಿಲ್ ಕನೆಕ್ಟ್ ಪೋರ್ಟಲ್ ನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಹಾಗೂ ಕೌಶಕಾಭಿವೃದ್ಧಿ ಸಚಿವ  ಡಾ: ಸಿ.ಎನ್.ಅಶ್ವತ್ಥ್ ನಾರಾಯಣ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಕರ್ನಾಟಕ ಕೌಶಲಾಭಿವೃದ್ಧಿ ನಿಗಮ ನಿಯಮಿತ ಆಯೋಜಿಸಿದ್ದ ಸ್ಕಿಲ್ ಕನೆಕ್ಟ್ ಪೋರ್ಟಲ್ ನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಹಾಗೂ ಕೌಶಕಾಭಿವೃದ್ಧಿ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ ಉಪಸ್ಥಿತರಿದ್ದರು.   

ಬೆಂಗಳೂರು: ರಾಜ್ಯ ಸರ್ಕಾರವು ಬೇಡಿಕೆ ಆಧಾರಿತ ಕೌಶಲ ಅಭಿವೃದ್ಧಿ ತರಬೇತಿಗೆ ಆದ್ಯತೆ ನೀಡುತ್ತಿದ್ದು, ನಾಡಿನ ಯುವಜನರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅವರು ಸೋಮವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕೌಶಲ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ವಿವಿಧ ಪಾಲುದಾರರನ್ನು ಜೋಡಿಸಲು ಈ ಪೋರ್ಟಲ್‍ನ್ನು ಅಭಿವೃದ್ಧಿಗೊಳಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಕೇಂದ್ರಗಳು, ಉದ್ಯಮ, ಅಂತರರಾಷ್ಟ್ರೀಯ ಏಜೆನ್ಸಿಗಳು ಹಾಗೂ ಸರ್ಕಾರವನ್ನು ಒಂದುಗೂಡಿಸುವ ಸಂಪರ್ಕ ಸೇತುವಾಗಿ ಸ್ಕಿಲ್ ಕನೆಕ್ಟ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದು ಅವರು ನುಡಿದರು.

ADVERTISEMENT

ಯುವಕರಿಗೆ ತಮ್ಮ ಕೌಶಲವನ್ನು ಹೆಚ್ಚಿಸಲು, ಅಗತ್ಯ ಕೌಶಲ್ಯ ಮತ್ತು ಪರಿಣತಿಯನ್ನು ಪಡೆದುಕೊಳ್ಳಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಖಚಿತವಾದ ಉದ್ಯೋಗಾವಕಾಶಕ್ಕಾಗಿ ಕೌಶಲ ತರಬೇತಿಗಳನ್ನು ನೀಡಲು ಮತ್ತು ಕೌಶಲ್ಯಗಳನ್ನು ಉನ್ನತೀಕರಿಸಲು 1000 ಪದವೀಧರರಿಗೆ ಕೌಶಲಾಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ₹2 ಕೋಟಿ ವೆಚ್ಚದಲ್ಲಿ ಪ್ರತಿಭಾ ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೋವಿಡ್ 19ರ ಕಾರಣದಿಂದಾಗಿ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ನಡುವೆ ಉಂಟಾಗಿರುವ ಅಂತರ ನಿವಾರಿಸುವ ನಿಟ್ಟಿನಲ್ಲಿ ಜುಲೈ 7 ರಂದು ಬೃಹತ್ ಆನ್ ಲೈನ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಸ್ಕಿಲ್ ಕನೆಕ್ಟ್ ಪೋರ್ಟಲ್ ಮೂಲಕ ನಾಡಿನ ಯುವಕರಿಗೆ ಉತ್ತಮ ಅವಕಾಶ ಒದಗಿಸುವ ಮಹತ್ವಪೂರ್ಣ ಉಪಕ್ರಮವಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ರಾಜ್ಯ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.