ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಇರುವ ಕಡೆ ಬಿಎಸ್‌ಪಿ ತಟಸ್ಥ: ಎನ್‌.ಮಹೇಶ್‌

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2018, 20:23 IST
Last Updated 29 ಅಕ್ಟೋಬರ್ 2018, 20:23 IST

ಮಂಡ್ಯ: ‘ರಾಜ್ಯದಲ್ಲಿ ನಡೆಯುತ್ತಿರುವ ಐದು ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಇರುವ ಕಡೆ ಬಿಎಸ್‌ಪಿ ಬೆಂಬಲ ನೀಡಲಿದೆ. ಕಾಂಗ್ರೆಸ್‌ ಅಭ್ಯರ್ಥಿ ಇರುವ ಕಡೆಯಲ್ಲಿ ತಟಸ್ಥವಾಗಿ ಉಳಿಯಲಿದೆ’ ಎಂದು ಬಿಎಸ್‌ಪಿ ರಾಜ್ಯ ಉಸ್ತುವಾರಿ, ಶಾಸಕ ಎನ್‌.ಮಹೇಶ್‌ ಇಲ್ಲಿ ಸೋಮವಾರ ಹೇಳಿದರು.

‘ಮೈತ್ರಿ ಸರ್ಕಾರಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಐದು ವರ್ಷ ಅಧಿಕಾರದಲ್ಲಿ ಉಳಿಯಲು ಈ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಬೇಕು. ಜೆಡಿಎಸ್‌ ಅಭ್ಯರ್ಥಿಗಳು ಇರುವ ಕಡೆಯಲ್ಲಿ ನಮ್ಮ ಪಕ್ಷದ ಮುಖಂಡರು ಪ್ರಚಾರ ನಡೆಸಲಿದ್ದಾರೆ. ಸಮ್ಮಿಶ್ರ ಸರ್ಕಾರಕ್ಕೆ ಶಕ್ತಿ ತುಂಬಲು ಈ ಉಪ ಚುನಾವಣೆ ಮುಖ್ಯವಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಪಕ್ಷ ಸಂಘಟಿಸುವ ಉದ್ದೇಶದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಿಕ್ಷಣ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಲು 24X7 ಕೆಲಸ ಮಾಡಬೇಕು. ಇದರಿಂದ ಪಕ್ಷ ಸಂಘಟನೆಗೆ ತೊಡಕಾಗುತ್ತಿತ್ತು. ಮಹೇಶ್‌ ಬೆಂಗಳೂರು ಸೇರಿಕೊಂಡರು ಎಂಬ ಮಾತು ಕ್ಷೇತ್ರದಲ್ಲಿ ಕೇಳಿಬಂದವು. ಹೀಗಾಗಿ ರಾಜೀನಾಮೆ ನೀಡಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಬಿಎಸ್‌ಪಿ ಹೊರ ಬಂದಿದೆ. ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಜೊತೆ ಮತ್ತೆ ಹೊಂದಾಣಿಕೆ ಮಾಡಿಕೊಳ್ಳಬಹುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.