ಎಚ್.ಕೆ.ಪಾಟೀಲ
ಬೆಂಗಳೂರು: ರಾಜ್ಯದ ಪುರಸಭೆ ಮತ್ತು ಮಹಾನಗರಪಾಲಿಕೆಗಳ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಿಸುವ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.
ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 190 (2–ಎ) ಅಡಿ ಸರ್ಕಾರಕ್ಕಿರುವ ಅಧಿಕಾರದಂತೆ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ +2 ಅಂತಸ್ತು ಅಥವಾ ಸ್ಟಿಲ್ಟ್ + ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲು ಒಪ್ಪಿಗೆ ನೀಡಲಾಯಿತು ಎಂದರು.
ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಕಲಂ 310(3) ರಡಿ ಸರ್ಕಾರಕ್ಕಿರುವ ಅಧಿಕಾರದಂತೆ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ +2 ಅಂತಸ್ತು ಅಥವಾ ಸ್ಟಿಲ್ಟ್+ ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲು ಒಪ್ಪಿಗೆ ನೀಡಲಾಯಿತು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.