ADVERTISEMENT

ಸಾರಿಗೆ ಮುಷ್ಕರ: 25 ನೌಕರರ ವಿರುದ್ಧ ಕ್ರಮ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 20:14 IST
Last Updated 18 ಡಿಸೆಂಬರ್ 2020, 20:14 IST

ಬೆಂಗಳೂರು: ಡಿ. 10ರಿಂದ 14ರವರೆಗೆ ನಡೆದ ಸಾರಿಗೆ ನಿಗಮಗಳ ನೌಕರರ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಬಸ್‌ಗಳನ್ನು ಜಖಂಗೊಳಿಸಿದ ಆರೋಪ ಎದುರಿಸುತ್ತಿರುವ 25 ನೌಕರರ ವಿರುದ್ಧ ಮಾತ್ರ ಕ್ರಮ ಜರುಗಿಸಲಾಗಿದೆ ಎಂದು ಸಾರಿಗೆ ನಿಗಮಗಳ ಜಂಟಿ ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ 13, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಮೂವರು ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 9 ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಕೆಲವು ಸಿಬ್ಬಂದಿಯನ್ನು ಅಮಾನತು ಮಾಡಿದ್ದರೆ ಮತ್ತೆ ಕೆಲವರಿಗೆ ನೋಟಿಸ್ ನೋಡಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಯಾವುದೇ ನೌಕರರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಈ ನಿಗಮಗಳ ಮುಖ್ಯಸ್ಥರು ತಿಳಿಸಿದ್ದಾರೆ.

ಎಫ್‌ಐಆರ್‌ ದಾಖಲಾದ ಪ್ರಕರಣಗಳಿಗೆ ಸೀಮಿತವಾಗಿ ಕ್ರಮ ಕೈಗೊಳ್ಳಲಾಗಿದೆ. ಮುಷ್ಕರದ ಅವಧಿಯ ನಾಲ್ಕು ದಿನಗಳ ವೇತನವನ್ನು ಕಡಿತ ಮಾಡುವುದಕ್ಕೆ ಸಂಬಂಧಿಸಿದಂತೆಯೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಈ ಹಿಂದೆ ವಿತರಿಸಲಾಗಿರುವ ವೇಗದೂತ ಬಸ್‌ಗಳ ಮಾಸಿಕ ಪಾಸ್‌ಗಳ ಅವಧಿಯನ್ನು ಮುಷ್ಕರದ ಕಾರಣದಿಂದ ನಾಲ್ಕು ದಿನಗಳ ಕಾಲ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.