ADVERTISEMENT

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 19:44 IST
Last Updated 8 ಜೂನ್ 2021, 19:44 IST
ಕೊಲೆಯಾಗಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ
ಕೊಲೆಯಾಗಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ   

ಉಡುಪಿ: ಇಲ್ಲಿನ ಇಂದ್ರಾಳಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ, ಪುತ್ರ ಸೇರಿದಂತೆ ಮೂವರು ಆರೋಪಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಭಾಸ್ಕರ್‌ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಶಿಕ್ಷೆಗೊಳಗಾದ ಅಪರಾಧಿಗಳು. ಸಾಕ್ಷ್ಯನಾಶದ ಆರೋಪ ಎದುರಿಸುತ್ತಿದ್ದ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇನ್ನೊಬ್ಬ ಆರೋಪಿಯಾಗಿದ್ದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್, ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಅವರು ಮಂಗಳವಾರ ಮಧ್ಯಾಹ್ನ ಶಿಕ್ಷೆ ಪ್ರಕಟಿಸಿದರು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದರು.

ADVERTISEMENT

ಪ್ರಕರಣದ ವಿವರ: ಆರೋಪಿಗಳು 2016ರ ಜುಲೈ 28ರಂದು ಮಧ್ಯಾಹ್ನ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ಬಳಿಕ ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯ ಹೋಮ ಕುಂಡದಲ್ಲಿ ಮೃತದೇಹವನ್ನು ಸುಟ್ಟು ಹಾಕಿದ್ದರು.

ಜುಲೈ 31ರಂದು ಭಾಸ್ಕರ್ ಶೆಟ್ಟಿ ಅವರ ತಾಯಿ, ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು, ಆಗಸ್ಟ್‌ 7 ರಂದು ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್‌ನನ್ನು ಮತ್ತು ಆಗಸ್ಟ್‌ 8 ರಂದು ನಿರಂಜನ್ ಭಟ್‌ನನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.