ADVERTISEMENT

ರೌಡಿ ಶೀಟರ್ ಕೊಲೆ ಪ್ರಕರಣ | ಬೈರತಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 19:07 IST
Last Updated 13 ಆಗಸ್ಟ್ 2025, 19:07 IST
ಬೈರತಿ ಬಸವರಾಜ್‌
ಬೈರತಿ ಬಸವರಾಜ್‌   

ಬೆಂಗಳೂರು: ‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿರುವ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ವಿರುದ್ಧ ಬಲವಂತದ ಕ್ರಮ ಜರುಗಿಸಬೇಡಿ’ ಎಂದು ಹೈಕೋರ್ಟ್‌ ಪ್ರಕರಣದ ತನಿಖಾಧಿಕಾರಿಗೆ ಆದೇಶಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಭಾರತಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಪ್ರಕರಣದ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್‌ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ.

ವಿಚಾರಣೆ ವೇಳೆ ಬೈರತಿ ಬಸವರಾಜ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್‌ ಜೆ.ಚೌಟ, ‘ಹೈಕೋರ್ಟ್‌ ಈ ಮುನ್ನ ನೀಡಿದ್ದ ನಿರ್ದೇಶನದ ಅನುಸಾರ ಅರ್ಜಿದಾರರು ತನಿಖಾಧಿಕಾರಿ ಮುಂದೆ ಹಾಜರಾಗಿದ್ದಾರೆ. ಈವರೆಗಿನ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಮುಂದೆಯೂ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧರಿದ್ದಾರೆ.  ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ತಡೆ ನೀಡಬೇಕು’ ಎಂದು ಕೋರಿದರು.

ADVERTISEMENT

ಆದರೆ, ಇದಕ್ಕೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ಆದ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತನಿಖೆಗೆ ಅಗತ್ಯ ಸಹಕಾರ ನೀಡಬೇಕು. ತನಿಖಾಧಿಕಾರಿಗಳು ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸುವಂತಿಲ್ಲ’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.