ADVERTISEMENT

‘ಸಿಎಎ ಪ್ರತಿಭಟನೆ: ಪೊಲೀಸರ ತಪ್ಪಿಲ್ಲ‘

ಮಾಜಿಸ್ಟ್ರೀರಿಯಲ್ ವರದಿಗೆ ಸಮ್ಮತಿ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 16:58 IST
Last Updated 22 ಅಕ್ಟೋಬರ್ 2021, 16:58 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಮತ್ತು ಗುಂಡಿನ ದಾಳಿಯಲ್ಲಿ ಪೊಲೀಸರ ತಪ್ಪಿಲ್ಲ ಎಂಬ ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿಯನ್ನು ಒಪ್ಪಿಕೊಳ್ಳಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

2019ರ ಡಿಸೆಂಬರ್ 19ರಂದು ನಡೆದಿದ್ದ ಹಿಂಸಾಚಾರದಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಪ್ರಕರಣದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶಿಸಿತ್ತು.

ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಬಗ್ಗೆ ವಿವರ ಸಲ್ಲಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ‘ಈ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಪೊಲೀಸ್ ಸಿಬ್ಬಂದಿ ವಿರುದ್ಧದ ಆರೋಪಗಳನ್ನು ಕೂಡ ವಿಚಾರಣೆ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

ಜುಲೈ 26ರ ವಿಚಾರಣೆ ವೇಳೆ ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದ್ದ ಸರ್ಕಾರ, ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಮಯಾವಕಾಶ ಕೋರಿತ್ತು.

ಅರ್ಜಿದಾರರ ಪರ ಹಾಜರಿದ್ದ ವಕೀಲ ಪ್ರೊ. ರವಿವರ್ಮ ಕುಮಾರ್, ‘ಪೊಲೀಸರ ವಿರುದ್ಧ ಕನಿಷ್ಠ 10 ದೂರುಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಒಂದನ್ನೂ ತನಿಖೆ ಮಾಡಿಲ್ಲ. ಹೈಕೋರ್ಟ್‌ ಸೂಚಿಸಿದ್ದರೂ,ಎಫ್‌ಐಆರ್ ದಾಖಲಿಸಿಲ್ಲ’ ಎಂದು ಹೇಳಿದರು.

ನ್ಯಾಯಾಲಯ ನೀಡಿದ ಆದೇಶಗಳನ್ನು ಪಾಲಿಸಿರುವ ಬಗ್ಗೆ ಅನುಸರಣಾ ವರದಿ ಒಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಇತ್ತೀಚೆಗೆ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮತ್ತು ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸ್ಥಳೀಯ ಪೊಲೀಸರು ಪಕ್ಷಪಾತ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ನಿರೀಕ್ಷೆಯಲ್ಲಿ 2019ರ ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ಸಿಆರ್‌ಪಿಸಿ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ಪೊಲೀಸರು ಜಾರಿಗೊಳಿಸಿದ್ದರು. ಅಂದು ನಡೆದ ಗುಂಡಿನ ದಾಳಿಯಲ್ಲಿ ಜಲೀಲ್ ಮತ್ತು ನೌಸೀನ್ ಎಂಬುವವರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.