ADVERTISEMENT

ಸಚಿವ ಸಂಪುಟ ಸಭೆ ಸೋಮವಾರ: ರಾಜ್ಯದಲ್ಲೂ ಉಚಿತ ಲಸಿಕೆ ?

ಕರ್ಫ್ಯೂ ಉಳಿದ ದಿನಗಳಿಗೂ ವಿಸ್ತರಣೆ?: ನಾಳೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 21:00 IST
Last Updated 24 ಏಪ್ರಿಲ್ 2021, 21:00 IST
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ಹೇರಿರುವ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಪರಿಣಾಮಗಳನ್ನು ಸೋಮವಾರ (ಏ. 26) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅವಲೋಕಿಸಿ, ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

‘ವಾರಾಂತ್ಯ ಕರ್ಫ್ಯೂ’ ಅವಧಿಯಲ್ಲಿ ತೆಗೆದುಕೊಂಡ ಕಠಿಣ ಕ್ರಮಗಳನ್ನು ವಾರದ ದಿನಗಳಲ್ಲೂ ಮುಂದುವರಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮೇ 1ರಿಂದ 18 ವರ್ಷ ದಾಟಿದವರಿಗೂ ಕೋವಿಡ್‌ ಲಸಿಕೆ ವಿತರಣೆ ಆರಂಭವಾಗಲಿದ್ದು, ಉಚಿತವಾಗಿ ವಿತರಿಸುವ ಬಗ್ಗೆಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

₹ 400 ಕೋಟಿ ವೆಚ್ಚದಲ್ಲಿ ಒಂದು ಕೋಟಿ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಖರೀದಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.

ADVERTISEMENT

ರಾಜ್ಯದಲ್ಲಿ ಉಚಿತವಾಗಿ ಲಸಿಕೆ ವಿತರಿಸಲು ಕನಿಷ್ಠ ₹ 2 ಸಾವಿರ ಕೋಟಿ ಅಗತ್ಯವಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದೂ ಮೂಲಗಳು ತಿಳಿಸಿವೆ.

ಜಾರ್ಖಂಡ್, ಗೋವಾ, ಛತ್ತೀಸ್‌ಗಡ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ಹಂಚಿಕೆ ಮಾಡುವುದಾಗಿ ಅಲ್ಲಿನ ರಾಜ್ಯ ಸರ್ಕಾರಗಳು ಘೋಷಣೆ ಮಾಡಿವೆ. ಆ ಬೆನ್ನಲ್ಲೇ, ರಾಜ್ಯದಲ್ಲೂ ಉಚಿತವಾಗಿ ಲಸಿಕೆ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ‘ಸೋಮವಾರದಿಂದಲೂ ವಾರಾಂತ್ಯದ ಕರ್ಫ್ಯೂ ಕ್ರಮಗಳನ್ನು ಮುಂದುವರಿಸಿದರೆ ಒಳ್ಳೆಯದು ಎಂಬ ಅಭಿಪ್ರಾಯ ಸರ್ಕಾರಕ್ಕಿದೆ. ಆದರೆ, ಜನ ಬೇಡವೆಂದು ಹೇಳುತ್ತಿದ್ದಾರೆ’ ಎಂದರು.

‘ಸರ್ಕಾರವೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಎಲ್ಲರೂ ಜವಾಬ್ದಾರಿಯುತವಾಗಿರಬೇಕು. ಆಸ್ಪತ್ರೆಗಳನ್ನು ರಾತ್ರೋರಾತ್ರಿ ಸಿದ್ಧ ಮಾಡಲು ಸಾಧ್ಯವಿಲ್ಲ. ವೆಂಟಿಲೇಟರ್, ಐಸಿಯು, ಆಕ್ಸಿಜನ್ ಪೂರೈಕೆ ವ್ಯವಸ್ಥೆ, ವೈದ್ಯರು, ದಾದಿಯರ ನೇಮಕಕ್ಕೆ ಕನಿಷ್ಠ 15 ದಿನ ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ, ಈಗ ವಿಧಿಸಿರುವ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಾಗಬೇಕು’ ಎಂದರು.

ಉಚಿತ ಲಸಿಕೆ: ಎಚ್‌ಡಿಕೆ ಮನವಿ
‘ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರೂವರೆ ಕೋಟಿ ಜನರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಅವರು, ‘ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. 18 ವರ್ಷ ದಾಟಿದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಸರ್ಕಾರವೇ ಪ್ರಕಟಿಸಬೇಕು. ಕನಿಷ್ಠ ₹ 2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿಗೆ ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆ ಆಗದು’ ಎಂದಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿ.ಎಂ
ಎಲ್ಲ ಜಿಲ್ಲಾಧಿಕಾರಿಗಳಿಗೆ ಶನಿವಾರ ಕರೆ ಮಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೋವಿಡ್‌ ಸೋಂಕಿತರಿಗೆ ಹಾಸಿಗೆ ಮತ್ತು ಆಕ್ಸಿಜನ್ ಲಭ್ಯತೆ ಕುರಿತು ಮಾಹಿತಿ ಪಡೆದರು.

‘ಆಕ್ಸಿಜನ್‌ ಅಥವಾ ರೆಮ್‌ಡಿಸಿವರ್‌ ಚುಚ್ಚುಮದ್ದು ಕೊರತೆ ಉಂಟಾದರೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ನನ್ನ ಗಮನಕ್ಕಾದರೂ ತರಬೇಕು. ಯಾವುದೇ ಕಾರಣಕ್ಕೂ ಆಕ್ಸಿಜನ್ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ ಉಂಟಾಗಬಾರದು. ಬೇರೆ ಏನಾದರೂ ತೀರಾ ಅಗತ್ಯ ಕಂಡುಬಂದರೆ ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನನ್ನ ಗಮನಕ್ಕೆ ತರಬೇಕು’ ಎಂದೂ ಮುಖ್ಯಮಂತ್ರಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.