ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಪಾದಯಾತ್ರೆ ವೇಳೆ ಕೊರೋನಾ ನಿಯಮ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿದೆ.
ತಡೆ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕನಕಪುರ ಟೌನ್ ಠಾಣಾ ಪೊಲೀಸರು ಮತ್ತು ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳ ಮುಂದಿನ ಕಾನೂನು ಪ್ರಕ್ರಿಯೆಗೆ ನ್ಯಾಯಪೀಠ ಇದೇ ವೇಳೆ ತಡೆ ನೀಡಿದ್ದು ವಿಚಾರಣೆ ಮುಂದೂಡಿದೆ.
‘ಪ್ರಜಾಧ್ವನಿ‘ ಯಾತ್ರೆ ನಡೆಸುವ ವೇಳೆ ಮಂಡ್ಯದಲ್ಲಿ ₹ 500 ನೋಟನ್ನು ಕಾರ್ಯಕರ್ತರತ್ತ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶಿವಕುಮಾರ್ ಹಿಂಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ‘ಬಿ‘ ಅಂತಿಮ ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಡಿ.ಕೆ.ಶಿವಕುಮಾರ್ ಹಿಂಪಡೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.