ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
‘ನನ್ನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಯತ್ನಾಳ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಪ್ರಕಟಿಸಿದರು.
‘ರಾಹುಲ್ ಗಾಂಧಿ ಅಮೆರಿಕದಲ್ಲಿ ಭಾರತದ ವಿರುದ್ಧ ಮಾತನಾಡಿದ್ದಾರೆ ಎಂದು ಟೀಕಿಸುವ ಭರದಲ್ಲಿ ಯತ್ನಾಳ್ ಅವರು, ರಾಹುಲ್ ಅವರ ಪೂರ್ವಜರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದರನ್ವಯ ಪೊಲೀಸರು ಯತ್ನಾಳ್ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 192 (ಗಲಭೆ ನಡೆಸುವುದಕ್ಕಾಗಿ ಉದ್ದೇಶಪೂರ್ವಕ ಪ್ರಚೋದನೆ), 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷ ಹರಡುವುದು) 353(2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅವಕಾಶವಾಗುವಂತಹ ಹೇಳಿಕೆ) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.