ಸಿದ್ದರಾಮಯ್ಯ
ಬೆಂಗಳೂರು: 'ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ನಡೆಯಲಿದೆ. ಈ ಸಮೀಕ್ಷೆಗಾಗಿ ತಾತ್ಕಾಲಿಕವಾಗಿ ₹420 ಕೋಟಿ ನಿಗದಿಪಡಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಸಂಬಂಧ ಮಾಹಿತಿಯನ್ನು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಹಂಚಿಕೊಂಡಿದ್ದಾರೆ.
'ನಾಡಿನ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ' ಎಂದು ತಿಳಿಸಿದ್ದಾರೆ.
'ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ ನಡೆಯಲಿದೆ' ಎಂದು ಹೇಳಿದ್ದಾರೆ.
'1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ₹20 ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ₹325 ಕೋಟಿ ವೆಚ್ಚವಾಗಲಿದೆ. ತಾತ್ಕಾಲಿಕವಾಗಿ ₹420 ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು' ಎಂದು ಹೇಳಿದ್ದಾರೆ.
'ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಿದೆ. ದತ್ತಾಂಶ ಸರಿಯಾಗಿ ಗೊತ್ತಾದರೆ ಮಾತ್ರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ' ಎಂದು ಪ್ರತಿಪಾದಿಸಿದ್ದಾರೆ.
'ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ. ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ' ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.