ಅಶೋಕ– ಸಿದ್ದರಾಮಯ್ಯ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ( ಜಾತಿ ಗಣತಿ) ವರದಿಯನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ, ಪರ–ವಿರೋಧದ ಚರ್ಚೆಯನ್ನೇ ಹುಟ್ಟು ಹಾಕಿದೆ.
ಈ ವಿಷಯ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಟೀಕೆಗೆ ಸಿದ್ದರಾಮಯ್ಯ ಅದೇ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಚದುರಂಗದಾಟಕ್ಕೆ ಜಾತಿ ಜನಗಣತಿ ವಿಷಯವನ್ನು ದಾಳವಾಗಿ ಬಳಸಿಕೊಂಡಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.
‘ಜಾತಿಗಣತಿ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ನಮ್ಮ ತಕರಾರು ಇಲ್ಲ. ವಿರೋಧವೂ ಇಲ್ಲ’ ಎಂದು ಅವರು ‘ಎಕ್ಸ್’ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಗೆ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ’ ಎಂದಿರುವ ಅಶೋಕ ಅವರು, ಈ ಕೆಳಕಂಡ ಪ್ರಶ್ನೆಗಳನ್ನು ಕೇಳಿದ್ದಾರೆ.
ನಿಮಗೆ ನಿಜವಾಗಿಯೂ ಜಾತಿ ಗಣತಿ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜ ವರದಿಯನ್ನು ಸ್ವೀಕರಿಸಿ ಏಕೆ ಜಾರಿ ಮಾಡಲಿಲ್ಲ?
ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ಸಾಕಷ್ಟು ಜನರ ಮನೆಗಳಿಗೆ ಭೇಟಿ ನೀಡಿ ಮಾಹಿತಿಯನ್ನೇ ಪಡೆದಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನು, ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?
ಒಕ್ಕಲಿಗರ ಸಂಘ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಜಾತಿಗಣತಿಯನ್ನು ಅವೈಜ್ಞಾನಿಕ ಎಂದು ಕರೆದಿವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ವಿರೋಧಿಸಿದ್ದಾರೆ. ಕಳೆದ 17 ತಿಂಗಳಿಂದ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಿಢೀರ್ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ?
ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವುದರಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನು ದಾಳವಾಗಿ ಬಳಸಿಕೊಳ್ಳಲಾತ್ತಿದೆಯೇ?
ಇದೇ 18ರಂದು ನಡೆಯುವ ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಯವರ ಆತ್ಮಸಾಕ್ಷಿ ಈ ಪ್ರಶ್ನೆಗಳನ್ನು ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ.
‘ಜಾತಿ ಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ ಅಶೋಕ ಅವರೇ ನೀವು ಇದೇ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಜನ ಗಣತಿಯ ಜೊತೆ ಜಾತಿ ಗಣತಿಯನ್ನೂ ನಡೆಸುವಂತೆ ಒತ್ತಡ ಹೇರಿ. ನಿಮ್ಮ ಬದ್ಧತೆ ಮತ್ತು ಸತ್ಯಸಂಧತೆಯನ್ನು ಸಾಬೀತುಪಡಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ‘ಅಶೋಕರವರೇ ನಿಮ್ಮ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು. ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ಮಾತ್ರ ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ’ ಎಂದು ಕುಟುಕಿದ್ದಾರೆ.
ಮೀಸಲಾತಿ ಬಗ್ಗೆಯಾಗಲಿ ಒಟ್ಟು ಸಾಮಾಜಿಕ ನ್ಯಾಯದ ಬಗ್ಗೆಯಾಗಲಿ ಬಿಜೆಪಿ ಮತ್ತು ಆರ್‌ಎಸ್ಎಸ್ ನಿಲುವು ಏನು ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ನೀವು ಯಾವ ವೇಷ ಧರಿಸಿ ಬಣ್ಣ ಬಳಿದುಕೊಂಡು ಮಾತನಾಡಿದರೂ ನಿಮ್ಮ ಆಂತರ್ಯದ ಅಭಿಪ್ರಾಯ ಏನೆಂಬುದು ಜನರಿಗೆ ತಿಳಿದಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಒಪ್ಪಲು ನಮ್ಮ ಪಕ್ಷ ಮತ್ತು ಸರ್ಕಾರ ಬದ್ಧವಾಗಿದೆ. ಕಾಂತರಾಜ ಆಯೋಗ ನಡೆಸಿದ್ದ ಈ ಸಮೀಕ್ಷೆ 2018ರಲ್ಲಿ ಪೂರ್ಣಗೊಂಡಿದ್ದರೂ ಅಂಕಿಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ‍್ಳದೆ ಇದ್ದ ಕಾರಣ ಆಗ ವರದಿ ಸ್ವೀಕರಿಸಲು ಸಾಧ್ಯ ಆಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ.
ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿ ಗಣತಿಯನ್ನು ಒಪ್ಪಿದ್ದಾರೆ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ –ಸಂಶಯಗಳನ್ನು ಮಾತುಕತೆ ಮೂಲಕ ಬಗೆಹರಿಸಿ ಈ ವರದಿಯನ್ನು ಒಪ್ಪುವ ನಿರ್ಧಾರವನ್ನು ಶೀಘ್ರ ಕೈಗೊಳ್ಳಲಾಗುವುದು
ಇದೇನು ದಿಢೀರ್ ನಿರ್ಧಾರ ಅಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಈ ಬಗ್ಗೆ ಸಮಾಲೋಚನೆ ನಡೆಸುತ್ತಲೇ ಬಂದಿದ್ದೇವೆ. ಯಾವುದೇ ಚರ್ಚೆ-ಸಂವಾದ ಇಲ್ಲದೆ ದಿಢೀರ್ ನಿರ್ಧಾರ ಕೈಗೊಳ್ಳುವ ಸರ್ವಾಧಿಕಾರಿ ಧೋರಣೆ ನಮ್ಮದಲ್ಲ.
ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು ಅಶೋಕ ಅಮಾಯಕರಂತೆ ಪ್ರಶ್ನಿಸಿದ್ದಾರೆ. ಆದರೆ ಈ ವರದಿಯನ್ನು ಇಲ್ಲಿಯವರೆಗೆ ದಲಿತರಾಗಲಿ ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ?
ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿಯೂ ಜಾತಿಗಣತಿ ನಡೆಸುವ ಧೈರ್ಯವನ್ನು ಯಾಕೆ ಮಾಡಿಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ಜಾತಿಗಣತಿ ನಡೆಸುವುದನ್ನು ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ರಾಹುಲ್ ಗಾಂಧಿ ಮತ್ತೆ ಮತ್ತೆ ಅದನ್ನು ಒತ್ತಿ ಹೇಳುತ್ತಿದ್ದಾರೆ. ಬಿಜೆಪಿಗೆ ಜಾತಿಗಣತಿ ಬಗ್ಗೆ ತಕರಾರು ಇಲ್ಲದೆ ಇದ್ದರೆ ಪಕ್ಷದ ನಾಯಕರು ಯಾಕೆ ಇದಕ್ಕೆ ಸಹಮತ ವ್ಯಕ್ತಪಡಿಸದೆ ಟೀಕಿಸುತ್ತಿದ್ದಾರೆ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.